ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಸರ್ಕಾರದಿಂದ ಹೆಚ್ಚಿನ ಒತ್ತು: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಳಗಾವಿ: ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಿದೆ. 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಿ ನಿರ್ವಹಿಸಲಾಗುತ್ತಿದೆ. ಈ ಶಾಲೆಗೆಳಲ್ಲಿ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

- Advertisement -

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿ, ಮಾತನಾಡಿದರು.
ಶಾಲೆಗಳಿಂದ ಹೊರಗುಳಿದ ಅಲ್ಪಸಂಖ್ಯಾತರ ಮಕ್ಕಳನ್ನು ಮರಳಿ ಶಾಲೆಗೆ ತರಲು ಈಗಾಗಲೇ ಮುಚ್ಚಲ್ಪಟ್ಟ ಸರ್ಕಾರಿ ಉರ್ದು ಶಾಲೆಗಳ ಜಾಗದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಹೊಸದಾಗಿ ಶಾಲೆಗಳನ್ನು ಪ್ರಾರಂಭಿಸಲು ಜನಪ್ರತಿನಿಧಿಗಳಿಂದ ಪ್ರಸ್ತಾವನೆಗಳು ಬಂದಿವೆ. ಇವುಗಳ ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸದಾಗಿ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.ಅಲ್ಲಿಯವರೆಗೂ ಅತಿಥಿ ಶಿಕ್ಷಕರ ಮೂಲಕ ಶಾಲೆಗಳನ್ನು ನಡೆಸಲಾಗುವುದು ಎಂದರು.

ಇದೇ ವೇಳೆಯಲ್ಲಿ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ತಮ್ಮ ಕ್ಷೇತ್ರದಲ್ಲಿ 7 ಶಾದಿ ಮಹಲ್ ಗಳು ಮಂಜೂರಾಗಿದ್ದರೂ ಕೂಡ ಅನುದಾನ ಬಿಡುಗಡೆಯಾಗದಿರುವ ಕುರಿತು ಕೇಳಿದ ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು, ಕೋವಿಡ್ ಲಾಕ್ ಡೌನ್ ಕಾರಣದಿಂದ ಹಲವಾರು ಅನುದಾನಗಳನ್ನು ಕಡಿತಗೊಳಿಸಲಾಗಿದೆ. ಅಲ್ಪಸಂಖ್ಯಾತರ ಶಿಕ್ಷಣ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಹಣ ಒದಗಿಸಲಾಗುವುದು ಎಂದರು.

Join Whatsapp