ಮಂಡ್ಯ: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಇಂದಿನಿಂದ (ಆ.08) ಹಣ ಜಮಾವಣೆ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಜೂನ್ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಮಹಿಳಾ ಸಬಲೀಕರಣ ಭಾಗವಾಗಿ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಸರ್ಕಾರ ಮನೆಯ ಯಜಮಾನಿ ಖಾತೆಗೆ 2 ಸಾವಿರ ರೂ. ಜಮೆ ಮಾಡುತ್ತದೆ. ಕಳೆದ 10 ತಿಂಗಳಿಂದ ಹಣ ಜಮೆಯಾಗಿತ್ತು. ಆದರೆ ಜೂನ್ ಮತ್ತು ಜುಲೈನ ಹಣ ಜಮಾವಣೆಗೊಂಡಿಲ್ಲ.