ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶಗಳು ಜಾತಿ ಮತ್ತು ಧರ್ಮ ಆಧಾರಿತ ಎಲ್ಲ ರಾಜಕೀಯವನ್ನೂ ಬುಡಮೇಲು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಈ ಎರಡೂ ರಾಜ್ಯಗಳ ಮತದಾರರು ಜಾತಿ ಮತ್ತು ಧರ್ಮ ಆಧಾರಿತ ರಾಜಕೀಯ ಲೆಕ್ಕಾಚಾರಗಳನ್ನು ಮೀರಿ ರಾಜ್ಯದ ಹಾಗೂ ದೇಶದ ಅಭಿವೃದ್ಧಿ ಮುಖ್ಯ ಎಂಬುದನ್ನು ಎತ್ತಿ ತೋರಿಸಿದ್ದಾರೆ. ಇದಕ್ಕಾಗಿ ನಾನು ಆ ರಾಜ್ಯಗಳ ಜನತೆಯನ್ನು ಹಾಗೂ ಮತದಾರರನ್ನು ಅಭಿನಂದಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಈ ದೇಶದ ಅಭಿವೃದ್ಧಿ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರದಿಂದ ಮಾತ್ರ ಸಾಧ್ಯ ಎಂಬುದು ಇದರಿಂದ ಸಾಬೀತಾಗಿದೆ. ಗುಜರಾತ್ ಚುನಾವಣೆಯ ಫಲಿತಾಂಶವು ಒಂದು ಐತಿಹಾಸಿಕ ಅಭೂತಪೂರ್ವ ದಾಖಲೆಯನ್ನು ಸೃಷ್ಟಿಸಿದ್ದು, ಆ ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿದ ಖ್ಯಾತಿಯನ್ನು ಭಾರತೀಯ ಜನತಾ ಪಕ್ಷಕ್ಕೆ ಲಭಿಸಿದೆ. ಯಾರೂ ಏನೆ ಮಾತನಾಡಿದರೂ, ರಾವಣ, ಭಸ್ಮಾಸುರ ಎಂಬೆಲ್ಲ ವಿಶ್ಲೇಷಣೆಗಳನ್ನು ಮಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವ್ಯಕ್ತಿತ್ವವನ್ನು ಹಾಳುಗೆಡವಬಹುದು ಎಂಬ ಭ್ರಮೆಯಲ್ಲಿದ್ದ ವಿರೋಧ ಪಕ್ಷಗಳಿಗೆ ದೇಶದ ಜನರು ತಕ್ಕ ಪಾಠ ಕಲಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ಸುಭದ್ರವಾಗಿದ್ದು, ಅಭಿವೃದ್ಧಿ ಹೊಂದಿದ ದೇಶವಾಗಿ ಹೊರಹೊಮ್ಮುತ್ತಿದ್ದು, ವಿಶ್ವಗುರುವಾಗುವತ್ತ ದಾಪುಗಾಲಿಡುತ್ತಿದೆ ಎಂದರು.
ಕರ್ನಾಟಕ ರಾಜ್ಯದಲ್ಲಿಯೂ ಭಾರತೀಯ ಜನತಾ ಪಕ್ಷವು ಮುಂದಿನ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ. ವಿರೋಧ ಪಕ್ಷಗಳು ಇನ್ನಾದರೂ ಅಧಿಕಾರದ ಹಗಲು ಕನಸು ಕಾಣುವುದನ್ನು ಬಿಟ್ಟು ಹಾಗೂ ಪ್ರಧಾನಿಗಳ ಬಗ್ಗೆ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಿ ದೇಶದ ಅಭಿವೃದ್ಧಿ ಬಗ್ಗೆ ಹೆಚ್ಚು ಗಮನ ನೀಡಲು ಸಲಹೆ ನೀಡುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು.