ಮುಂಬೈ: ಜೂನ್ ತಿಂಗಳಾಂತ್ಯದಲ್ಲಿ ನಡೆಯಲಿರುವ ಐರ್ಲೆಂಡ್ ವಿರುದ್ಧದ ಎರಡು ಟಿ-20 ಪಂದ್ಯಗಳಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
ಜೂನ್ 26 ಮತ್ತು 28ರಂದು ಪಂದ್ಯ ನಡೆಯಲಿದ್ದು, ಈ ವೇಳೆ ರೋಹಿತ್ ಶರ್ಮಾ ನೇತೃತ್ವದಲ್ಲಿ ಹಿರಿಯ ಆಟಗಾರರು ಇಂಗ್ಲೆಂಡ್ ಪ್ರವಾಸಕ್ಕಾಗಿ ತೆರಳಲಿದ್ದಾರೆ. ಕೆಎಲ್ ರಾಹುಲ್ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ರಾಹುಲ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್, ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಸರಣಿ ಕೊನೆಗೊಳ್ಳುತ್ತಲೇ ಪಂತ್, ಆಂಗ್ಲರ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯವನ್ನಾಡಲು ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ಒಲಿದುಬಂದಿದೆ.
ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹೊಸ ಫ್ರಾಂಚೈಸಿ ಗುಜರಾತ್ ಟೈಟನ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೆ ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ, ಚೊಚ್ಚಲ ನಾಯಕತ್ವದ ಪ್ರಯೋಗದಲ್ಲೇ ಯಶಸ್ಸು ಕಂಡಿದ್ಡರು
ರಾಹುಲ್ ತ್ರಿಪಾಠಿಗೆ ಹೊಸ ಮುಖ
ಐಪಿಎಲ್ನ 15ನೇ ಆವೃತ್ತಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಪರ ಬ್ಯಾಟಿಂಗ್ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದ ರಾಹುಲ್ ತ್ರಿಪಾಠಿ ಇದೇ ಮೊದಲ ಬಾರಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಅಫ್ರಿಕಾ ವಿರುದ್ಧದ ಸರಣಿಯಲ್ಲಿ ಅವಕಾಶ ಕಳೆದುಕೊಂಡಿದ್ದ ಸಂಜು ಸಾಮ್ಸನ್ ಮತ್ತು ಗಾಯದಿಂದ ಹೊರಗುಳಿದಿದ್ದ ಸೂರ್ಯಕುಮಾರ್ ಯಾದವ್ ತಂಡಕ್ಕೆ ಮರಳಿದ್ದಾರೆ.
ಐರ್ಲೆಂಡ್ ಪ್ರವಾಸಕ್ಕೆ ಭಾರತ ತಂಡ; ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಯುಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್