ಬೆಂಗಳೂರು: ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಿಂದಲೇ ವೀಡಿಯೋ ಕರೆ ಮಾಡಿ ಕುಟುಂಬಸ್ಥರೊಂದಿಗೆ ಮಾತನಾಡಿದ್ದಾರೆ ಎಂಬುದು ದೊಡ್ಡ ಸುದ್ದಿಯಾಗುತ್ತಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
11 ಮಂದಿ ಆರೋಪಿಗಳ ವಿರುದ್ಧ ಈ ಪ್ರಕರಣ ದಾಖಲಾಗಿದೆ.
ಪರಪ್ಪನ ಅಗ್ರಹಾರದಲ್ಲಿರುವ ಹರ್ಷ ಕೊಲೆ ಆರೋಪಿಗಳು ಜೈಲಿನಲ್ಲಿರುವ ಇಬ್ಬರು ವಿಚಾರಣಾಧೀನ ಖೈದಿಗಳಿಂದಲೇ ಮೊಬೈಲ್ ಪಡೆದಿರುವುದು ಬಹಿರಂಗವಾಗಿದೆ. ಆರೋಪಿಗಳು ಮನೆಯವರಿಗೆ ಕರೆ ಮಾಡಿ ಮಾತನಾಡಿದ್ದರು. ಕೊಲೆ ಆರೋಪಿಗಳು ಕಾಲ್ ಮಾಡಿ ಮಾತನಾಡಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪರಪ್ಪನ ಅಗ್ರಹಾರದಲ್ಲಿ ಆರೋಪಿಗಳು ಬಿಂದಾಸ್ ಜೀವನ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.