ಹೊಳೆನರಸೀಪುರ: ಸರ್ಕಾರಿ ಪ್ರಾಥಮಿಕ ಶಾಲೆಯೊಂದು ಶಿಥಿಲಗೊಂಡು ಬೀಳುವ ಹಂತ ತಲುಪಿದ್ದು, ಕಟ್ಟಡದ ಶಿಥಿಲಾವಸ್ಥೆಯನ್ನು ಕಂಡು ಆತಂಕಗೊಂಡ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿ ನಂತರ ಮಕ್ಕಳನ್ನು ವಾಪಸ್ ಮನೆಗೆ ಕರೆದುಕೊಂಡು ಹೋದ ಘಟನೆ ಉದ್ದೂರು ಗ್ರಾಮದಲ್ಲಿ ನಡೆದಿದೆ.
‘ಮಕ್ಕಳು ತರಗತಿಯೊಳಗೆ ಕುಳಿತಿದ್ದಾಗ ಏನಾದರೂ ಅನಾಹುತ ನಡೆದರೆ ಯಾರು ಹೊಣೆ? ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೂ ಪರವಾಗಿಲ್ಲ. ಯಾವುದೇ ಅನಾಹುತ ಆಗಬಾರದು ಎಂಬ ಉದ್ದೇಶದಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದೇವೆ’ ಎಂದು ಪೋಷಕರು ಹೇಳಿದರು.
‘ಶಾಲಾ ಕಟ್ಟಡ ಶಿಥಿಲವಾಗಿದ್ದು ಪೋಷಕರು ಆತಂಕಗೊಂಡು ಮಕ್ಕಳನ್ನು ಶಾಲೆಗೆ ಕಳುಹಿಸದೆ ಮನೆಗೆ ಕರೆದುಕೊಂಡು ಹೋಗಿದ್ದಾರೆ’ ಎಂದು ಮುಖ್ಯ ಶಿಕ್ಷಕ ಮಲ್ಲಪ್ಪ ಹೇಳಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಗ್ರಾಮದ ಮುಖಂಡ ಕಾಂತರಾಜು, ‘ನಮ್ಮೂರಿನ ಈ ಶಾಲೆ 70 ವರ್ಷ ಹಳೆಯದಾಗಿದ್ದು, ಸಂಪೂರ್ಣ ಶಿಥಿಲಗೊಂಡು ಬೀಳುವ ಹಂತದಲ್ಲಿದೆ. ಈ ಶಾಲೆಯನ್ನು ದುರಸ್ತಿಗೊಳಿಸಿ ಎಂದು ಶಾಸಕ ಎಚ್.ಡಿ. ರೇವಣ್ಣ ಹಾಗೂ ಅರಕಲಗೂಡು ಕ್ಷೇತ್ರದ ಶಾಸಕ ಎ.ಟಿ. ರಾಮಸ್ವಾಮಿ ಅವರಿಗೆ, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮನವಿ ನೀಡುತ್ತಲೇ ಬಂದಿದ್ದೇವೆ. ಆದರೆ, ಏನೂ ಪ್ರಯೋಜನ ಆಗಿಲ್ಲ. ಆದ್ದರಿಂದ ಕಟ್ಟಡ ಆಗುವವರೆಗೂ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ’ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಿ.ಆರ್. ಬೀನಾ, ಸದಸ್ಯ ಮೋಹನ್ಕುುಮಾರ್, ಮುಖಂಡರಾದ ಮಲ್ಲೇಶಯ್ಯ, ಸಂಗಪ್ಪ, ಸೋಮಶೇಖರ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಯೋಗರಾಜ್, ಯಮುನಾ, ಗ್ರಾಮದ ಸುಜಾತಾ, ನಾಗರತ್ನಾ, ರೂಪಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.