ನವದೆಹಲಿ: ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿ, ಬಿಜೆಪಿಯಿಂದ ವಜಾಗೊಂಡಿರುವ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಜೀವ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಇದರ ಆಧಾರದಲ್ಲಿ ಘಟನೆಯ ಕುರಿತು ತನಿಖೆಯನ್ನು ಆರಂಭಿಸಲಾಗುವುದೆಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೂಪುರ್ ಶರ್ಮಾ ಅವರಿಗೆ ಜೀವ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 153 ಎ, 506, 507, 509 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ನೂಪುರ್ ಶರ್ಮಾ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಮತ್ತು ರಾಷ್ಟ್ರೀಯ ವಕ್ತಾರೆ ಹುದ್ದೆಯಿಂದ ಭಾನುವಾರ ಅಮಾನತುಗೊಳಿಸಲಾಗಿದೆ.