ಬೆಂಗಳೂರು: ತಮಿಳುನಾಡಿನಿಂದ ಬಂದು ಕೆಫೆಯಲ್ಲಿ ಬಾಂಬ್ ಇರಿಸಿ ಹೋಗುತ್ತಾರೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ದಾಖಲಾಗಿದ್ದ ಎಫ್ ಐಆರ್ ಹಾಗೂ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ.
ನಗರ್ತಪೇಟೆ ಪೋಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ನಗರ್ತಪೇಟೆಯಲ್ಲಿ ಬಿಜೆಪಿ ಹಾಗೂ ಹಿಂದೂ ಜಾಗರಣಾ ವೇದಿಕೆ ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿಯಲ್ಲಿ ಮಾತನಾಡಿದ್ದ ಅವರು, ‘ವಿಧಾನಸೌಧ ಆವರಣಕ್ಕೆ ಯಾರೋ ಬಂದು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುತ್ತಾರೆ. ಮತ್ತೊಬ್ಬ ಹೆಣ್ಣು ಮಕ್ಕಳ ಮೇಲೆ ಆ್ಯಸಿಡ್ ದಾಳಿ ನಡೆಸುತ್ತಾನೆ. ಸ್ವಂತ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಸಿ.ಡಿ ಹಾಕಿದ್ದಕ್ಕೆ ಯುವಕನ ಮೇಲೆ ಇನ್ನೊಂದು ಗುಂಪು ಹಲ್ಲೆ ನಡೆಸುತ್ತದೆ. ಯಾರೋ ತಮಿಳುನಾಡಿನಿಂದ ಬಂದು ಬಾಂಬ್ ಇರಿಸಿ ಹೋಗುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ’ ಎಂದು ಹೇಳಿದ್ದರು.
ಈ ಹೇಳಿಕೆಯು ತಮಿಳುನಾಡಿನವರನ್ನು ಅವಮಾನಿಸುವಂತಹದ್ದು ಎಂಬ ಆಕ್ಷೇಪ ವ್ಯಕ್ತವಾಗಿತ್ತು.