ಎಚ್ ಡಿ ಕುಮಾರಸ್ವಾಮಿ ಮಹಾಭಾರತದ ಶಕುನಿ ಇದ್ದಹಾಗೆ: ಕಾಂಗ್ರೆಸ್ ವಾಗ್ದಾಳಿ

Prasthutha|

ಬೆಂಗಳೂರು: ಬೆಂಗಳೂರಿನ ಐಟಿ ದಾಳಿ ವಿಚಾರವಾಗಿ ಕಾಂಗ್ರೆಸ್ ಸರ್ಕಾರ, ಡಿಕೆ ಶಿವಕುಮಾರ ವಿರುದ್ಧ ಕಿಡಿಕಾರಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರನ್ನು ಮಹಾಭಾರತದ ಶಕುನಿ, ರಾಮಾಯಣದ ಮಂಥರೆಗೆ ಹೋಲಿಸಿ ರಾಜ್ಯ ಆಡಳಿತರೂಢ ಕಾಂಗ್ರೆಸ್ ಟ್ವೀಟರ್ ಎಕ್ಸ್ ಮೂಲಕ ತೀವ್ರ ವಾಗ್ದಾಳಿ ನಡೆಸಿದೆ.

- Advertisement -


ಈ ಬಗ್ಗೆ ಕಾಂಗ್ರೆಸ್ ಟ್ವಿಟ್ ಮಾಡಿದ್ದು, ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ ಎಂದಿರುವ ಕಾಂಗ್ರೆಸ್. ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ. ಹಿಂದಿನ ನಿಮ್ಮ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ “ಕೋಮು-ಕುಂಡ”ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವ್ಯಂಗ್ಯ ಮಾಡಿರುವ ಕಾಂಗ್ರೆಸ್.


ಕುಮಾರಸ್ವಾಮಿಯವರೇ, ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ, ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು, “ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ” ಎಂದು. ಆದರೆ ಸಿದ್ದಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜತೆ ನಿಂತಿತ್ತು. ಕಾಂಗ್ರೆಸ್ ದಯಾಭಿಕ್ಷೆಯಿಂದ ಎರಡನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ? ಓಹ್.. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ ಎಂದು ಎಚ್ಡಿ ಕುಮಾರಸ್ವಾಮಿಯವರ ವಿರುದ್ಧ ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

- Advertisement -


ಐಟಿ ದಾಳಿ ವೇಳೆ ಗುತ್ತಿಗೆದಾರ ಮನೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿದ್ದ ವಿಚಾರ ಎಚ್ಡಿ ಕುಮಾರಸ್ವಾಮಿಯವರು ಇದು ಕಾಂಗ್ರೆಸ್ ನವರದ್ದೇ ಹಣ. ಇದು ವೈಎಸ್ ಟಿ ಕಲೆಕ್ಷನ್ ಹಣ ಎಂದು ಗಂಭೀರ ಆರೋಪ ಮಾಡಿದ್ದರು. ಡಿಕೆ ಶಿವಕುಮಾರ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದರು. ಇದೀಗ ಕಾಂಗ್ರೆಸ್ ಎಚ್ಡಿ ಕುಮಾರಸ್ವಾಮಿಯವರನ್ನು ಮಹಾಭಾರತದ ಶಕುನಿಗೆ ಹೋಲಿಸಿ ಟ್ವೀಟರ್ ಎಕ್ಸ್ ಮೂಲಕ ವಾಗ್ದಾಳಿ ನಡೆಸಿದೆ.