ಬೆಂಗಳೂರು: ಹಿರಿಯ ಪತ್ರಕರ್ತ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಕೆ.ಸಿ. ಸದಾನಂದ ನಿಧನರಾಗಿದ್ದಾರೆ.
ಸದಾನಂದ ಅವರಿಗೆ ಸೋಮವಾರ ರಾತ್ರಿ ಹೃದಯಾಘಾತವಾಗಿದ್ದು, ತಕ್ಷಣ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಪತ್ನಿ, ಪುತ್ರ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸದಾ ಕ್ರಿಯಾಶೀಲವಾಗಿದ್ದ ಚನ್ನಪಟ್ಟಣದ ಸದಾನಂದ, ಸಂಜೆವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು.
ಎಚ್.ಡಿ.ಕುಮಾರಸ್ವಾಮಿ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಈಗಲೂ ಕೆಲಸ ಮಾಡುತ್ತಿದ್ದರು. ಬೆಂಗಳೂರು ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಸಹ ಕಾರ್ಯ ನಿರ್ವಹಿಸಿದ್ದರು. ಕೆ.ಸಿ.ಸದಾನಂದ ಅವರ ನಿಧನಕ್ಕೆ ಬೆಂಗಳೂರು ವರದಿಗಾರರ ಕೂಟದ ಕಾರ್ಯಕಾರಿಣಿ ಸಮಿತಿ ತೀವ್ರ ಸಂತಾಪ ವ್ಯಕ್ತ ಪಡಿಸಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದು, ದೀರ್ಘ ಕಾಲದ ನನ್ನ ಒಡನಾಡಿ, ಹಿರಿಯ ಪತ್ರಕರ್ತ, ಮಾಧ್ಯಮ ಕಾರ್ಯದರ್ಶಿಯೂ ಆಗಿದ್ದ ಕೆ.ಸಿ. ಸದಾನಂದ ನಿಧನರಾಗಿದ್ದಾರೆ. ಅವರ ಅಗಲಿಕೆ ನನ್ನನ್ನು ನೋವಿಗೆ ತಳ್ಳಿದೆ. ಎಂಥ ಆಮಿಷಗಳಿಗೂ ಜಗ್ಗದ ಸದಾನಂದ ಕರ್ತವ್ಯ ನಿಷ್ಠೆ, ಸ್ವಾಮಿನಿಷ್ಠೆಯನ್ನೂ ಪ್ರದರ್ಶಿಸಿದ್ದರು. ಅವರ ಕುಟುಂಬದ ನೋವು ನನ್ನದೂ ಕೂಡ. ನೀವು ನಿರ್ಗಮಿಸಿದರೂ ‘ಸದಾ’ ನೆನಪಲ್ಲಿರುತ್ತೀರಿ ಎಂದು ಟ್ವೀಟ್ ಮಾಡಿದ್ದಾರೆ.