ತುಮಕೂರು: ಶೀಘ್ರದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ 24X7 ಕಾರ್ಯ ನಿರ್ವಹಿಸುವ ಸಹಾಯವಾಣಿ ತೆರೆಯಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗಿಗಳಿಗೆ ಸಹಾಯವಾಗುವ ಉದ್ದೇಶದಿಂದ ಸಹಾಯವಾಣಿ ಆರಂಭಿಸಲಾಗುತ್ತಿದೆ. ಪ್ರತಿ ಸಹಾಯವಾಣಿಗೆ ನಾಲ್ವರು ಸಿಬ್ಬಂದಿ ನಿಯೋಜಿಸಲಾಗುತ್ತದೆ. ಪ್ರತಿ ಪಾಳಿಯಲ್ಲಿ ಇಬ್ಬರು ಕೆಲಸ ನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
‘ಕೆಲ ಆಸ್ಪತ್ರೆಗಳಲ್ಲಿ ಶೇ 40 ರಿಂದ ಶೇ 50ರಷ್ಟು ಸಿಜೇರಿಯನ್ ಹೆರಿಗೆ ಮಾಡಿಸಲಾಗುತ್ತಿದೆ. ಈ ಪ್ರಮಾಣವನ್ನು ಶೇ 20– 40ಕ್ಕೆ ಇಳಿಸಬೇಕಾಗಿದೆ. ಅದಕ್ಕಾಗಿ ಸಮಿತಿ ರಚಿಸಲಾಗಿದೆ. ಜತೆಗೆ ಕಾನೂನು ರೂಪಿಸಿ, ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡಿಸುವುದಕ್ಕೂ ಕಡಿವಾಣ ಹಾಕಲಾಗುವುದು’ ಎಂದು ಸಚಿವರು ತಿಳಿಸಿದರು.