ಮುಂಬೈ: ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಪಕ್ಷದ ನಾಯಕರನ್ನು ಅನರ್ಹಗೊಳಿಸುವಂತೆ ಕೋರಿ ಶಿವಸೇನೆ ಸಲ್ಲಿಸಿರುವ ಅರ್ಜಿ ಸೇರಿದಂತೆ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 11ರಂದು ನಡೆಸಲಿದೆ.
ಶಿವಸೇನೆಯ ಮುಖ್ಯ ಸಚೇತಕ ಸುನಿಲ್ ಪ್ರಭು ಅವರು ತಮ್ಮ ಅನರ್ಹತೆಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೆ ತಮ್ಮನ್ನು ಸದನದಿಂದ ಅಮಾನತುಗೊಳಿಸುವಂತೆ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಶಿಂಧೆ ಮತ್ತು ಅವರ ಶಾಸಕರ ಗುಂಪನ್ನು ವಿಧಾನಸಭೆಗೆ ಪ್ರವೇಶಿಸದಂತೆ ನಿರ್ಬಂಧಿಸುವ ಆದೇಶವನ್ನೂ ಪ್ರಭು ಕೋರಿದ್ದರು.
ಜುಲೈ 2 ರಿಂದ ಮಹಾರಾಷ್ಟ್ರ ವಿಧಾನಸಭೆಯ ಎರಡು ದಿನಗಳ ವಿಶೇಷ ಅಧಿವೇಶನ ನಡೆಯಲಿದೆ. ಏಕನಾಥ್ ಶಿಂಧೆ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ದಿನ ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.