Home ಕರಾವಳಿ ಮಂಗಳೂರು ನಗರ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಮುಂಜಾನೆಯಿಂದ ಭಾರೀ ಮಳೆ

ಮಂಗಳೂರು ನಗರ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಮುಂಜಾನೆಯಿಂದ ಭಾರೀ ಮಳೆ

ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗ್ಗಿನಿಂದಲೇ ಭಾರಿ ಮಳೆ ಸುರಿಯುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತು, ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿವೆ.


ನಗರದ ಪಂಪ್ ವೆಲ್, ತೊಕ್ಕೊಟ್ಟು, ಕೊಟ್ಟಾರ ಚೌಕಿ ಮತ್ತಿತರ ಕೆಲವು ಜಂಕ್ಷನ್ ಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಕಣ್ಣೂರು ಮತ್ತು ತೊಕ್ಕೊಟ್ಟು-ಮೆಲ್ಕಾರ್ ರಸ್ತೆಯನ್ನು ಸಂಪರ್ಕಿಸುವ ಹಲವು ಕಡೆಗಳಲ್ಲೂ ಕೂಡ ನೀರು ನಿಂತಿವೆ.

ನಗರದಲ್ಲಿ ನಡೆಯುವ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಇನ್ನು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೂಡ ಇಂದು ಭಾರೀ ಮಳೆಯಾಗುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಬೆಳಗಾವಿ, ಹಾವೇರಿ, ಧಾರವಾಡ ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

Join Whatsapp
Exit mobile version