ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆ ಸಾಧ್ಯತೆ

Prasthutha|

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.

- Advertisement -

ರಾಜ್ಯದ ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದಲ್ಲಿ ಮತ್ತೆ ಮಳೆ ಆರಂಭಗೊಂಡಿದ್ದು, ಇಂದು ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಉಂಟಾಗಿದೆ. ಇಂದು ಸಂಜೆಯ ಬಳಿಕ ಮತ್ತೆ ಮಳೆ ಶುರುವಾಗಲಿದೆ ಇಂದು ಮತ್ತು ನಾಳೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು –ಮಿಂಚಿನ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ತಾಪಮಾನದಲ್ಲಿಯೂ ವ್ಯತ್ಯಾಸಗಳಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ತಗ್ಗುಪ್ರದೇಶ, ರಾಜಕಾಲುವೆ ಅಕ್ಕಪಕ್ಕದಲ್ಲಿ ವಾಸ ಮಾಡುವವರು ಎಚ್ಚರದಿಂದಿರಿ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

- Advertisement -

ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ನವೆಂಬರ್ ತಿಂಗಳಲ್ಲಿ ಮತ್ತೆ ಮಳೆ ಆರಂಭಗೊಂಡಿದೆ.

ಇಂದಿನಿಂದ ನವೆಂಬರ್ 6ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ನಗರದಲ್ಲಿ ನಿನ್ನೆ ನಿನ್ನೆ ಸಂಜೆಯಿಂದ ಮಳೆ ಆರಂಭವಾಗಿದ್ದು ಇಂದಿನಿಂದ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 3ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.

ಈಶಾನ್ಯ ಮಾನ್ಸೂನ್ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ 3 ದಿನಗಳವರೆಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ.

ತಮಿಳುನಾಡಿನಲ್ಲಿ ಮುಂದಿನ 2 ದಿನಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ. ರಾಣಿಪೇಟ್, ಕಾಂಚೀಪುರಂ ಮತ್ತು ತಿರುವಳ್ಳೂರ್ ಪ್ರದೇಶಗಳಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದು ಪುದುಚೇರಿ ಮತ್ತು ಕೇರಳದ ಮಾಹೆಗೆ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ.

ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ, ತೆಲಂಗಾಣ, ಕೊಂಕಣ, ಗೋವಾದಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.



Join Whatsapp