ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯ ಭಾಗದಲ್ಲಿ ನಾಳೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲೂ ಕೂಡ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಈ ಬಾರಿ ಬೇಸಿಗೆ ಅಂದರೆ ಮೇ ತಿಂಗಳ ಆರಂಭದಿಂದಲೇ ಆಗಾಗ ಮಳೆ ಸುರಿಯುತ್ತಿತ್ತು. ಮುಂಗಾರು ಪ್ರವೇಶದ ನಂತರ ಮೊದಲ ಒಂದೆರಡು ವಾರಗಳನ್ನು ಹೊರತುಪಡಿಸಿದರೆ ಎಲ್ಲೆಡೆ ಮಳೆ ಕಡಿಮೆಯಾಗಿತ್ತು.
ಆದರೆ, ಇದೀಗ ಮಳೆ ಬರಲು ಆರಂಭಿಸಿದ್ದು, ಮಲೆನಾಡು, ಕರಾವಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ.