ಬೆಂಗಳೂರು: ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬಾರದ ಹಿನ್ನೆಲೆಯಲ್ಲಿ ಸಿಎಂ ಆಯ್ಕೆ ಜವಾಬ್ದಾರಿ ಹೈಕಮಾಂಡ್ ಹೆಗಲಿಗೆ ಬಿದ್ದಿದೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಿಎಂ ಗಾದಿ ರೇಸ್ ನಲ್ಲಿದ್ದು, ಸಭೆಯಲ್ಲಿ ಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಶಾಸಕರ ಮತ ಸಂಗ್ರಹಕ್ಕೂ ಡಿಕೆಶಿ ಒಪ್ಪಲಿಲ್ಲ. ಅಧಿಕಾರ ಹಂಚಿಕೆ ಸೂತ್ರಕ್ಕೂ ಅವರು ಒಪ್ಪಲಿಲ್ಲ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಹುದ್ದೆಗೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಇರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಈಗ ಅಧಿಕಾರಕ್ಕಾಗಿ ಗೊಂದಲ ಮಾಡಿಕೊಳ್ಳುವುದು ಬೇಡ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸೋಣ. ಉಳಿದಿದ್ದನ್ನು ಹೈಕಮಾಂಡ್ಗೆ ಬಿಡೋಣ ಎಂದು ವೀಕ್ಷಕರು ಹೇಳಿದ್ದಾರೆ.