ಪ್ರಸ್ತಕ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಉತ್ತೀರ್ಣಗೊಳಿಸುವ ವ್ಯವಸ್ಥೆಯನ್ನು ಪುನರಾವರ್ತಿತ ವಿದ್ಯಾರ್ಥಿಗಳಿಗೂ ವಿಸ್ತರಿಸುವ ಸಾಧ್ಯತೆ ಬಗ್ಗೆ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಪರೀಕ್ಷೆ ಇಲ್ಲದೇ ಪ್ರಸ್ತಕ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ನೋಟಿಫಿಕೇಷನ್ ರದ್ದುಪಡಿಸುವಂತೆ ಕೋರಿ ಬೆಂಗಳೂರಿನ ಜ್ಞಾನಮಂದಿರ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಎಸ್.ವಿ. ಸಿಂಗ್ರೇಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಮಂಗಳವಾರ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿದಾರ ಪರ ವಕೀಲ ಆರ್.ಪಿ. ಸೋಮಶೇಖರಯ್ಯ ವಾದ ಮಂಡಿಸಿ, ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಉತ್ತೀರ್ಣಗೊಳಿಸಲು ಸರ್ಕಾರವು ತೀರ್ಮಾನಿಸಿದೆ. ಇದೇ ವ್ಯವಸ್ಥೆಯನ್ನು ಪುನರಾವರ್ತಿತ ವಿದ್ಯಾರ್ಥಿಗಳಿಗೆ ವಿಸ್ತರಿಸಬೇಕು. ಇಲ್ಲವಾದರೆ ತಾರತಮ್ಯ ಮಾಡಿದಂತಾಗುತ್ತದೆ ಎಂದು ಕೋರಿದರು.
ಈ ವಾದ ಪರಿಗಣಿಸಿದ ನ್ಯಾಯಪೀಠ, ಪ್ರಥಮ ಪಿಯು ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ದ್ವಿತೀಯ ಪಿಯು ಪರೀಕ್ಷೆ ಬರೆಯಬೇಕಿರುವ ಪುನರಾವರ್ತಿತ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ಬಗ್ಗೆ ನಿಲುವು ತಿಳಿಸುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಜೂ.17ಕ್ಕೆ ಮುಂದೂಡಿತು.
ರಾಜ್ಯದಲ್ಲಿ ಪ್ರಸ್ತಕ ಸಾಲಿನಲ್ಲಿ ಏಳು ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಬೇಕಿತ್ತು. ಕೋವಿಡ್ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಅವರ ಮೊದಲ ಪಿಯು ಪರೀಕ್ಷೆಯ ಅಂಕ ಪರಿಗಣಿಸಿ ಉತ್ತೀರ್ಣ ಮಾಡುವ ಸಂಬಂಧ ಜೂ.3ರಂದು ರಾಜ್ಯ ಸರ್ಕಾರ ನೋಟಿಫಿಕೇಷನ್ ಹೊರಡಿಸಿದೆ. ಆದರೆ, ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಈ ಅನುಕೂಲ ಕಲ್ಪಿಸಿಲ್ಲ. ಇದು ತಾರತಮ್ಯ ನೀತಿಯಾಗಿದೆ. ರಾಜ್ಯದಲ್ಲಿ 95 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಅವರನ್ನೂ ಪರೀಕ್ಷೆ ಇಲ್ಲದೇ ಉತ್ತೀರ್ಣ ಮಾಡುವಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.