ಬೆಂಗಳೂರು: 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದ ಹಿನ್ನೆಲೆಯಲ್ಲಿ 5ನೇ ತರಗತಿಗಳಿಗೆ ಮಾರ್ಚ್ 27ರಿಂದ 30ರವರೆಗೆ ಹಾಗೂ 8ನೇ ತರಗತಿಗಳಿಗೆ ಮಾರ್ಚ್ 27ರಿಂದ ಏಪ್ರಿಲ್ 1ರವರೆಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 13ರಿಂದ ಪಬ್ಲಿಕ್ ಪರೀಕ್ಷೆ (ಮೌಲ್ಯಾಂಕನ) ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದನ್ನು ಪ್ರಶ್ನಿಸಿ ‘ಕುಸ್ಮಾ’ ಹೈಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ಏಕಸದಸ್ಯ ಪೀಠ ಪಬ್ಲಿಕ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ವಿಭಾಗೀಯ ಪೀಠ ಬುಧವಾರ ಪರೀಕ್ಷೆ ನಡೆಸಲು ಷರತ್ತುಬದ್ಧ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಪಬ್ಲಿಕ್ ಪರೀಕ್ಷೆ ನಡೆಸಲು ಮುಂದಾಗಿದೆ.