ಬೆಂಗಳೂರು: ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಖಂಡಿಸಿ ಪ್ರತಿಭಟನೆ ನಡೆಸಿದ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
2022ರ ಜೂ.16ರಂದು ಕೆಪಿಸಿಸಿ ವತಿಯಿಂದ ರಾಜಭವನ ಚಲೋ ಪ್ರತಿಭಟನೆ ನಡೆಸಿದ ಹಿನ್ನೆಲೆ ಶಿವಾಜಿನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಪ್ರಕರಣ ಸಂಬಂಧ 42ನೇ ಎಸಿಎಂಎಂ ಕೋರ್ಟ್ ಡಿಕೆ ಶಿವಕುಮಾರ್ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಇದನ್ನು ರದ್ದುಗೊಳಿಸುವಂತೆ ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಕಿರಿಯ ಶ್ರೇಣಿಯ ಅಧಿಕಾರಿಯಿಂದ ಪ್ರಕರಣ ದಾಖಲಿಸಿದ ಹಿನ್ನೆಲೆ ಅರ್ಜಿ ಪುರಸ್ಕರಿಸಿ ಪ್ರಕರಣ ರದ್ದುಪಡಿಸಿತು.
ಜೂ.16ರಂದು ಕೆಪಿಸಿಸಿ ವತಿಯಿಂದ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ ಪ್ರತಿಭಟನೆಯನ್ನು ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಾತ್ರ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದರು. ಆದರೆ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಿಂದ ಪ್ರತಿಭಟನೆ ರ್‍ಯಾಲಿ ನಡೆಸಲಾಗಿತ್ತು.
ಇತ್ತ, ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಹಿನ್ನೆಲೆ ಶಿವಾಜಿನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅವರು ಪ್ರಕರಣ ದಾಖಲಿಸಿದ್ದರು. ಅಲ್ಲದೆ, ದೂರಿನ ಅನ್ವಯ ಅಂತಿಮ ವರದಿಯನ್ನು 42ನೇ ಎಸಿಎಂಎಂ ಕೋರ್ಟ್ಗೆ ಸಲ್ಲಿಸಲಾಗಿತ್ತು. ಅದರಂತೆ ನ್ಯಾಯಾಲಯವು ಸಮನ್ಸ್ ಕೂಡ ಜಾರಿ ಮಾಡಿತ್ತು.