ಬೆಂಗಳೂರು : ಬಿಜೆಪಿ ಶಾಸಕರು ಮತ್ತು ಸಚಿವರು ಸೇರಿದಂತೆ ಹಲವು ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳನ್ನು ಕೈಬಿಡುವ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ಸುಮಾರು 62 ಶಾಸಕರು, ಸಚಿವರು, ಜನಪ್ರತಿನಿಧಿಗಳ 570ಕ್ಕೂ ಹೆಚ್ಚು ಪ್ರಕರಣಗಳನ್ನು ಹಿಂಪಡೆಯಲಾಗಿತ್ತು ಎನ್ನಲಾಗಿದೆ.
ಸಿಎಂ ಯಡಿಯೂರಪ್ಪ ಜಾರಿಗೊಳಿಸಿದ್ದ ಆದೇಶವನ್ನು ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟಿಸ್, ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ ನೇತೃತ್ವದ ವಿಭಾಗೀಯ ಪೀಠ ಇಂದು ಪರಿಶೀಲನೆ ನಡೆಸಿದೆ. ಅರ್ಜಿ ಪರಿಶೀಲನೆ ಬಳಿಕ ಸಿಎಂ ಆದೇಶಕ್ಕೆ ತಡೆ ನೀಡಲಾಗಿದೆ.
2021 ಜ.22ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಲಾಗಿದ್ದು, ಮುಂದಿನ ವಿಚಾರಣೆ ಜ.29ಕ್ಕೆ ಮುಂದೂಡಲಾಗಿದೆ.
ಉಪ ಸಮಿತಿ ಅಧ್ಯಕ್ಷರಾಗಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಶಿಫಾರಸ್ಸಿನ ಮೇರೆಗೆ ಆ.21ರಂದು ಯಡಿಯೂರಪ್ಪ ಸಚಿವರು, ಶಾಸಕರ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟಿದ್ದರು. ದಂಡ ಪ್ರಕ್ರಿಯಾ ಸಂಹಿತೆಯ ಕಲಂ 321ರಡಿ ಪ್ರಕರಣ ಕೈಬಿಡಲಾಗಿತ್ತು/
ಮೈಸೂರು ಸಂಸದ ಪ್ರತಾಪ್ ಸಿಂಹ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್, ಹೊನ್ನಾಳಿಯ ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳ ಪ್ರಕರಣಗಳನ್ನು ಕೈಬಿಡಲಾಗಿತ್ತು.
2014ರ ಆಗಸ್ಟ್ ನಿಂದ 2020ರ ಮೇ 5ರ ವರೆಗೆ ಸುಮಾರು 570ಕ್ಕೂ ಹೆಚ್ಚು ಪ್ರಕರಣಗಳನ್ನು ಕೈಬಿಡಲಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ವಕೀಲರೊಬ್ಬರು ತಿಳಿಸಿದ್ದಾರೆ.