ಮಂಗಳೂರು: ನಗರದ ಜೆರೋಸಾ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ ಸೇರಿದಂತೆ ಐವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.
ಫೆ.12ರಂದು ಜೆರೋಸಾ ಶಾಲೆಯಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ವಿಹಿಂಪ ಮುಖಂಡ ಶರಣ್ ಪಂಪೈಲ್, ಪಾಲಿಕೆ ಸದಸ್ಯರಾದ ಸಂದೀಪ್ ಗರೋಡಿ, ಭರತ್ ಕುಮಾರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಶಾಲೆಯ ಬಳಿಯ ನಿವಾಸಿ ಅನಿಲ್ ಜೆರಾಲ್ಡ್ ಲೋಬೊ ಎಂಬವರು ಪಾಂಡೇಶ್ವರ ಪೊಲೀಸ್ ಠಾಣೆಗೆ ನೀಡಿದ್ದು, ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಆರೋಪಿಗಳು ಹೈಕೋರ್ಟ್‌ನಲ್ಲಿ ಜಾಮೀನು ಪಡೆದಿದ್ದರು.
ಜಸ್ಟೀಸ್ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕರಣದ ತನಿಖೆಗೆ ತಡೆ ನೀಡಿದ್ದು, ದೂರುದಾರರಿಗೆ ನೋಟಿಸ್ ಜಾರಿಗೊಳಿಸಿ ಆದೇಶಿಸಿತು. ಜೆರೋಸಾ ಶಾಲೆಯ ವಿರುದ್ಧದ ಆರೋಪಗಳ ಬಗ್ಗೆ ಶಿಕ್ಷಣ ಇಲಾಖೆಯ ಕಲಬುರಗಿ ವಲಯ ಹೆಚ್ಚುವರಿ ಆಯುಕ್ತ ಡಾ.ಆಕಾಶ್ ವಿಚಾರಣೆ ನಡೆಸಿ ವರದಿ ತಯಾರಿಸಿದ್ದಾರೆ.