ಮಂಗಳೂರು : ಸಿಎಎ, ಎನ್ ಆರ್ ಸಿ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರು ನಡೆಸಿದ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎನ್ನುವುದರ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಮಂಗಳವಾರ ನಿರ್ದೇಶಿಸಿದೆ.
ಮಂಗಳೂರಿನಲ್ಲಿ 2019ರ ಡಿಸೆಂಬರ್ 19ರಂದು ಪ್ರತಿಭಟನಾಕಾರರ ಮೇಲೆ ನಡೆದಿದ್ದ ಗೋಲಿಬಾರ್ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲು ಸರಕಾರಕ್ಕೆ ನಿರ್ದೇಶನ ಕೋರಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಅಶ್ರಫ್ ಸಹಿತ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರಕಾರದ ಪರ ನ್ಯಾಯವಾದಿ ಪಿ. ತೇಜೇಶ್ ಹಾಜರಾಗಿ, ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪೂರ್ಣಗೊಂಡಿದೆ. ಉಡುಪಿ ಜಿಲ್ಲಾಧಿಕಾರಿ ಜಗದೀಶ್ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂದು ಹೇಳಿದರು.ನಂತರ, ಮ್ಯಾಜಿಸ್ಟ್ರೇಟ್ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು.
ವರದಿ ಪರಿಶೀಲನೆ ಹಂತದಲ್ಲಿದ್ದು, ಸದ್ಯದಲ್ಲೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ಕುರಿತು ಸರಕಾರ ನಿರ್ಧಾರ ಕೈಗೊಳ್ಳಲಿದೆ. ಇದಕ್ಕೆ ಎರಡು ವಾರಗಳ ಕಾಲಾವಕಾಶ ನೀಡಬೇಕೆಂದು ಕೋರಿದರು. ಸರಕಾರದ ಪರ ನ್ಯಾಯವಾದಿಯ ಹೇಳಿಕೆ ಪರಿಗಣಿಸಿದ ನ್ಯಾಯಪೀಠವು, ಮ್ಯಾಜಿಸ್ಟ್ರೇಟ್ ತನಿಖಾ ವರದಿ ಆಧರಿಸಿ, ತಪ್ಪಿತಸ್ಥರ ವಿರುದ್ಧ ಕೈಗೊಳ್ಳುವ ಕ್ರಮಗಳ ಕುರಿತ ವರದಿಯನ್ನು ಸರಕಾರ ಇದೇ ಆಗಸ್ಟ್ 25ರ ಒಳಗೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ನಂತರ ವರದಿಯಲ್ಲಿರುವ ವಿಷಯಗಳನ್ನು ಬಹಿರಂಗಪಡಿಸುವ ಕುರಿತು ನ್ಯಾಯಾಲಯ ಯೋಚಿಸಲಿದೆ ಎಂದು ಹೇಳಿತು.
ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿತು. ಸಂತ್ರಸ್ತರ ಪರವಾಗಿ ಅಡ್ವೊಕೇಟ್ ಪ್ರೊ.ರವಿವರ್ಮ ಕುಮಾರ್, ಲತೀಫ್, ಜಗದೀಶ್ ವಾದ ಮಂಡಿಸಿದರು.