Home ಟಾಪ್ ಸುದ್ದಿಗಳು ಹಿಜಾಬ್ ಪ್ರಕರಣ: ಮತ್ತೆ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ಹಿಜಾಬ್ ಪ್ರಕರಣ: ಮತ್ತೆ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ದೇಶದಾದ್ಯಂತ ಸದ್ದು ಮಾಡಿರುವ ಹಿಜಾಬ್ ಪ್ರಕರಣದ ತುರ್ತು ವಿಚಾರಣೆಗೆ ಸಿಜೆಐ ರಮಣ ನಿರಾಕರಿಸಿದ್ದಾರೆ. ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ ಎಂದಿರುವ ಅವರು, ವಿಷಯಗಳನ್ನು ಅತಿರಂಜಿತಗೊಳಿಸಬೇಡಿ ಎಂದು ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್ ಹಿಜಾಬ್ ತೀರ್ಪು ಪ್ರಶ್ನಿಸಿ ಅರ್ಜಿದಾರ ವಿದ್ಯಾರ್ಥಿನಿ ಪರ ವಕೀಲರಾದ ದೇವದತ್ತ ಕಾಮತ್ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು. ಅರ್ಜಿಯಲ್ಲಿ ಮಾ.28ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕೊಡುವುದಿಲ್ಲ. ವಿದ್ಯಾರ್ಥಿನಿಯರು ಶೈಕ್ಷಣಿಕ ವರ್ಷ ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ತುರ್ತಾಗಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಬೇಕು ಎಂದು ವಕೀಲರು ಕೋರಿಕೊಂಡಿದ್ದರು. ಈ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಸಿಜೆಐ ಎನ್.ವಿ.ರಮಣ, ವಿಷಯವನ್ನು ಅತಿರಂಜಿತಗೊಳಿಸಬೇಡಿ ಎಂದು ನುಡಿದಿದ್ದಾರೆ.

ಈ ಹಿಂದೆ ಕೂಡ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾಗ ಸುಪ್ರೀಂ ಅದನ್ನು ಹೋಳಿ ಹಬ್ಬದ ನಂತರ ವಿಚಾರಣೆ ನಡೆಸುವುದಾಗಿ ಹೇಳಿ, ವಿಚಾರಣೆ ಮುಂದೂಡಿತ್ತು. ಕರ್ನಾಟಕ ಹೈಕೋರ್ಟ್, ತನ್ನ ಇತ್ತೀಚಿನ ತೀರ್ಪಿನಲ್ಲಿ ಹಿಜಾಬ್ ಸೇರಿದಂತೆ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಪುಗಳ ಮೇಲಿನ ನಿಷೇಧವನ್ನು ಎತ್ತಿಹಿಡಿದಿತ್ತು. ಇಸ್ಲಾಂ ಧರ್ಮದಲ್ಲಿ ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದಾರೆ.

Join Whatsapp
Exit mobile version