ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಮಹತ್ವದ ಸಭೆ ನಡೆಸಲಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ ಆರು ಗಂಟೆಗೆ ಸಭೆ ನಡೆಯಲಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ವಿದ್ಯಾರ್ಥಿಗಳು ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಗುರುವಾರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ಪೂರ್ಣಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ಅದುವರೆಗೂ ಶಾಲೆ ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ವಸ್ತ್ರಗಳನ್ನು ಧರಿಸದಂತೆ ಸೂಚನೆ ನೀಡಿದೆ. ನ್ಯಾಯಾಲಯದ ಮಧ್ಯಂತರ ಆದೇಶವನ್ನು ಪರಿಗಣಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ ಸಿ ನಾಗೇಶ್, ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಸಭೆ ನಡೆಸಿ ಹೈಸ್ಕೂಲ್ ಪ್ರಾರಂಭಕ್ಕೆ ಅನುಮತಿ ನೀಡಿದ್ದಾರೆ. ಪಿಯು ಮತ್ತು ಪದವಿ ತರಗತಿಗಳು ಆರಂಭಿಸುವ ವಿಚಾರ ಇನ್ನೂ ಅನಿಶ್ಚಿತವಾಗಿದೆ. ಪರಿಸ್ಥಿತಿಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಳ ಮುಂದಿನ ಸ್ಥಿತಿಗತಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿ ಮಾಹಿತಿ ಪಡೆದುಕೊಂಡು ಪ್ರಸ್ತುತ ಪರಿಸ್ಥಿತಿ ಹಾಗೂ ಮುಂದೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸೂಚನೆ ನೀಡಲಿದ್ದಾರೆ.