ಬೆಂಗಳೂರು: ಕೋವಿಡ್ ರೂಪಾಂತರಿ ಒಮಿಕ್ರಾನ್ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ವಿದೇಶದಿಂದ ಬಂದವರಿಗೆ ಮನೆಯಲ್ಲಿಯೇ ಕ್ವಾರಂಟೈನ್ ಗೆ ಅವಕಾಶ ಕಲ್ಪಿಸಲಾಗಿದೆ. ಸಾಂಸ್ಥಿಕವಾಗಿ ಕ್ವಾರಂಟೈನ್ ಮಾಡುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಕ್ರಿಸ್ ಮಸ್, ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸರ್ಕಾರದ ಹಂತದಲ್ಲಿ ಶೀಘ್ರ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ವಿದೇಶಗಳಿಂದ ರಾಜ್ಯಕ್ಕೆ ಆಗಮಿಸುವವರನ್ನು ವಿಮಾನ ನಿಲ್ದಾಣಗಳಲ್ಲಿ ಅಥವಾ ಸಾಂಸ್ಥಿಕ ಕ್ವಾರೆಂಟೈನ್ ಮಾಡುವ ಯಾವುದೇ ಕಡ್ಡಾಯ ನಿಯಮ ಪ್ರಸ್ತುತ ಜಾರಿಯಲ್ಲಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರ ಹನ್ನೆರಡು ದೇಶಗಳನ್ನು ಹೈ ರಿಸ್ಕ್ ದೇಶಗಳೆಂದು ಗುರುತಿಸಿದೆ. ಅಲ್ಲಿಂದ ರಾಜ್ಯಕ್ಕೆ ಆಗಮಿಸುವವರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ಅವರು ತಮ್ಮ ಮನೆಗಳಲ್ಲೇ ಕ್ವಾರೆಂಟೈನ್ ಆಗುತ್ತಿದ್ದು ಅಂತಹವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೂ ನಿಗಾ ಇರಿಸಲಾಗಿದೆ ಎಂದರು.
ಡೆಲ್ಟಾ ರೂಪಾಂತರಿಗೆ ಹೋಲಿಸಿದಲ್ಲಿ ಒಮಿಕ್ರಾನ್ ವೇಗವಾಗಿ ಹರಡುವ ಲಕ್ಷಣ ಹೊಂದಿದ್ದು, ಸೂಕ್ತ ಮುನ್ನೆಚ್ಚರಿಕೆ ಪಾಲಿಸುವ ಮೂಲಕ ಸೋಂಕನ್ನು ನಿಯಂತ್ರಿಸಲು ಸಾಧ್ಯವಿದೆ. ರೂಪಾಂತರಿ ಸೋಂಕು ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ರೂಪಿಸುವ ಕುರಿತು ಸರ್ಕಾರದೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪಾಲಿಸಬೇಕಾದ ಕೋರೋನಾ ನಿಯಮಾವಳಿಗಳ ಕುರಿತು ಶೀಘ್ರದಲ್ಲೇ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.