ಬೆಂಗಳೂರು: ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .ಮೇ 5ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದೂ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಬುಧವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕುದಿನ ಒಣಹವೆ ಇರಲಿದೆ. ಇದೇ 6ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಮೇ 4ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ. ಬುಧವಾರದಿಂದ ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಎಂದು ತಿಳಿಸಿದೆ.
ಮಂಗಳವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಕಲಬುರಗಿಯಲ್ಲಿ ಗರಿಷ್ಠ (42.8 ಡಿಗ್ರಿ ಸೆಲ್ಸಿಯಸ್) ಉಷ್ಣಾಂಶ ವರದಿಯಾಗಿದೆ. ಬೆಂಗಳೂರಿನಲ್ಲಿ ಸಂಜೆ 5.30ಕ್ಕೆ ಅನ್ವಯಿಸಿದಂತೆ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ.