ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆಯ ನೆಪದಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವುದು ಸರಿಯಲ್ಲ ಮತ್ತು ಶಾಶ್ವತವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಮ್ ಕೋರ್ಟ್ ಹೇಳಿದೆ.
ಈ ನಿಟ್ಟಿನಲ್ಲಿ ರೈತರು ತಮ್ಮ ಸಮಸ್ಯೆಗಳನ್ನು ನ್ಯಾಯಾಂಗ, ಆಂದೋಲನ ಅಥವಾ ಸಂಸತ್ತಿನ ಚರ್ಚೆಗಳ ಮೂಲಕ ಪಡೆಯಬೇಕೇ ಹೊರತು ಹೆದ್ದಾರಿಗಳನ್ನು ನಿರ್ಬಂಧಿಸುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದೆ.
ನ್ಯಾಯಮೂರ್ತಿ ಎಂ.ಎಂ ಸುಂದ್ರೇಶ್ ಅವರನ್ನೊಳಗೊಂಡ ಪೀಠ, ಮುಕ್ತ ರಸ್ತೆ ಸಂಚಾರಕ್ಕೆ ಕೈಗೊಂಡ ಕ್ರಮಗಳನ್ನು ವಿವರಿಸುವಂತೆ ಸರ್ಕಾರಕ್ಕೆ ಆದೇಶ ನೀಡಿದ್ದಾರೆ.
ಈ ಕುರಿತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಸಂಬಂಧ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ರೈತರೊಂದಿಗೆ ಸಮಾಲೋಚನೆ ನಡೆಸಲು ಸರ್ಕಾರ ಸಿದ್ಧವಿದೆ. ಆದರೆ ರೈತರು ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಪೀಠಕ್ಕೆ ಮಾಹಿತಿ ನೀಡಿದರು.
ಎಸ್. ಜಿ ತುಷಾರ್ ಮೆಹ್ತಾ ಅವರ ವಾದವನ್ನು ಆಲಿಸಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 4 ಕ್ಕೆ ಮುಂದೂಡಿತು.