ಶಿವಮೊಗ್ಗ: ನಾನು ಈಗಲೂ ಬಿಜೆಪಿಯಲ್ಲಿಯೇ ಇದ್ದೇನೆ. ಆದರೆ ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಪ ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪು. ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ ಎಂದು ಚುನಾವಣೆಗೆ ಸ್ಪರ್ಧೆ ಮಾಡಿದ್ದೆ. ಮುಂದೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ. ಈ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ಹೇಳಿದ್ದಾರೆ.
ರಾಹುಲ್ ಗಾಂಧಿಯವರು ಸಂಸತ್ ನಲ್ಲಿ ಮಾಡಿದ ಭಾಷಣದ ಕುರಿತು, ನೇರವಾಗಿ ಹಿಂದೂ ಸಮಾಜ ಟೀಕೆ ಮಾಡುವ ಧೈರ್ಯವನ್ನು ಇದುವರೆಗೂ ಯಾರು ಮಾಡಿರಲಿಲ್ಲ. ಈಗ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಹಿಂದೂ ಧರ್ಮದ ಬಗ್ಗೆ ಟೀಕೆ ಮಾಡ್ತಿದ್ದಾರೆ. ಹಿಂದೂಗಳಿಗೆ ಅವರು ನೋವುಂಟು ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಗೌರವ ಬರುವ ರೀತಿ ಅವರು ನಡೆದುಕೊಳ್ಳಲಿ. ಇಲ್ಲದಿದ್ದರೆ ಇಡೀ ಹಿಂದೂ ಸಮಾಜ ಅವರ ವಿರುದ್ಧ ತಿರುಗಿ ಬೀಳಲಿದೆ ಎಂದು ಹೇಳಿದ್ದಾರೆ.