ಬೆಂಗಳೂರು: ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ಮಾತನಾಡಿದ್ದೇನೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಖಾತೆಯ ಸಚಿವ ಝಮೀರ್ ಅಹಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ತೆಲಂಗಾಣ ವಿಧಾನ ಸಭೆ ಚುನಾವಣೆ ಸ್ಟಾರ್ ಪ್ರಚಾರಕನಾದ ನಾನು ಹೈದರಾಬಾದ್ ನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ. ಆ ವಿಚಾರವನ್ನು ಅಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪೀಕರ್ ಸ್ಥಾನ ನೀಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ನಾವೆಲ್ಲರೂ ಅವರನ್ನು ಸನ್ಮಾನ್ಯ ಸಭಾಧ್ಯಕ್ಷರೇ ಎಂದು ಕರೆಯುತ್ತೇವೆ. ಅಷ್ಟೊಂದು ಉನ್ನತ ಹುದ್ದೆ ಏರುವ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಹಲವರು ನನ್ನ ಮಾತು ತಪ್ಪಾಗಿ ಅರ್ಥೈಸಿಕೊಂಡು ವಿವಾದದ ಸ್ವರೂಪ ನೀಡುತ್ತಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ಎರಡು ಸಚಿವ ಸ್ಥಾನ, ಪರಿಷತ್ ನಲ್ಲಿ ಮುಖ್ಯ ಸಚೇತಕ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ಎಲ್ಲದಕ್ಕಿಂತ ಹೆಚ್ಚಾಗಿ ಸ್ಪೀಕರ್ ಸ್ಥಾನ ನೀಡಿದೆ ಎಂದಷ್ಟೇ ಹೇಳಿದ್ದೇನೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತೇನೆ. ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ ಎಂದು ಪ್ರೆಶ್ನೆ ಮಾಡಿದ್ದಾರೆ.