ಇದ್ರೀಸ್ ಪಾಷಾ ಕೊಲೆ ಪ್ರಕರಣ| ಪುನೀತ್‌ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು

Prasthutha|

ಬೆಂಗಳೂರು: ಇದ್ರೀಸ್ ಪಾಷಾ ಕೊಲೆಪ್ರಕರಣದಲ್ಲಿ ಬಂಧಿತರಾಗಿದ್ದ ಹಿಂದುತ್ವ ಸಂಘಟನೆ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

- Advertisement -

ಪ್ರಕರಣದ ಆರೋಪಿಗಳಾದ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಪವನ್ ಕುಮಾರ್ ಎ.ಎನ್.ಪಿ ಲಿಂಗಪ್ಪ ಎಂಬುವವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಆರೋಪಿಗಳ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರ ನೇತೃತ್ವದ ರಜಾಕಾಲದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

- Advertisement -

“ಇದ್ರೀಸ್ ಪಾಷಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಪೂರ್ಣಗೊಂಡಿದ್ದು, ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆಯನ್ನೂ ಪೂರ್ಣಗೊಳಿಸಲಾಗಿದೆ. ಇನ್ನು ಚಾರ್ಜ್ ಶೀಟ್ ಸಲ್ಲಿಕೆಯಾಗಿ ವಿಚಾರಣೆ ನಡೆಯಬೇಕಿರುವುದರಿಂದ ಜಾಮೀನು ಮಂಜೂರು ಮಾಡಬೇಕು” ಎಂದು ಅರ್ಜಿದಾರರ ಪರ ವಾದಿಸಿದ ವಕೀಲರು ಮನವಿ ಮಾಡಿದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

ರಾಮನಗರ ಜಿಲ್ಲೆಯ ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಏಪ್ರಿಲ್ 1 ರ ಮುಂಜಾನೆ ಜಾನುವಾರು ಸಾಗಾಟ ವಾಹನದ ಸಹಾಯಕ ಚಾಲಕ ಮಂಡ್ಯದ ಗುತ್ತಲು ನಿವಾಸಿ ಇದ್ರೀಸ್ ಪಾಷಾ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 341, 504, 506, 324, 302, 34ರ ಅಡಿ ಪ್ರಕರಣ ದಾಖಲಾಗಿತ್ತು.

Join Whatsapp