Home ಟಾಪ್ ಸುದ್ದಿಗಳು ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ: ಡಿ.ಕೆ.ಶಿವಕುಮಾರ್

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ: ಡಿ.ಕೆ.ಶಿವಕುಮಾರ್

ಮಾಗಡಿ: ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಹೀಗಾಗಿ ಈ ಬಾರಿ ‘ಕೈ’ ಹಿಡಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿಯಲ್ಲಿ ಶುಕ್ರವಾರ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿದರು.
ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚುನಾವಣೆ ಮಾಡಿದ ಬಿಜೆಪಿ 600 ಭರವಸೆ ನೀಡಿತ್ತು. ಆದರೆ 550 ಈಡೇರಿಲ್ಲ. ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 80 ಹಾಗೂ ಜೆಡಿಎಸ್ 38 ಕ್ಷೇತ್ರಗಳಲ್ಲಿ ಗೆದ್ದಿದ್ದವು. ನಾವು ಜೆಡಿಎಸ್ ಪಕ್ಷಕ್ಕೆ ಬೇಷರತ್ತಾಗಿ ಬೆಂಬಲ ನೀಡಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು. ನಂತರ ರೈತರ ಸಾಲಮನ್ನಾ ಮಾಡಲು ನಾವು ಕುಮಾರಸ್ವಾಮಿ ಅವರಿಗೆ ಬೆಂಬಲವಾಗಿ ನಿಂತೆವು. ಈ ಹಿಂದೆ ಸಿದ್ದರಾಮಯ್ಯ ಅವರ ಕಾಲದಲ್ಲೂ 50 ಸಾವಿರವರೆಗಿನ ರೈತರ ಸಾಲ ಮನ್ನಾ ಮಾಡಲಾಗಿತ್ತು. ಆದರೆ ಆಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂತು. ಈ ಸರ್ಕಾರ ಕೊಟ್ಟ 600 ಭರವಸೆಗಳಲ್ಲಿ ಕೇವಲ 50 ಭರವಸೆ ಈಡೇರಿಸಿದ್ದು, 550 ಭರವಸೆ ಈಡೇರಿಸಲು ವಿಫಲವಾಗಿದೆ ಎಂದು ಡಿಕೆಶಿ ಟೀಕಿಸಿದರು.
ಬಿಜೆಪಿ ಸರ್ಕಾರ ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿತ್ತು. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದರು. 1 ಲಕ್ಷವರೆಗಿನ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಈ ಯಾವ ಭರವಸೆಯನ್ನು ಬಿಜೆಪಿ ಸರಕಾರ ಈಡೇರಿಸಲಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅನ್ನಭಾಗ್ಯ ಯೋಜನೆ ಜಾರಿ ಮಾಡಿ ಬಡ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 5 ಕೆ.ಜಿ ಅಕ್ಕಿ ಉಚಿತವಾಗಿ ನೀಡಿದೆವು. ನಂತರ ಇದನ್ನು 7 ಕೆ.ಜಿ.ಗೆ ಹೆಚ್ಚಳ ಮಾಡಿದೆವು. ಆದರೆ ಬಿಜೆಪಿ ಸರ್ಕಾರ ಇದನ್ನು 5 ಕೆ.ಜಿಗೆ ಇಳಿಸಿದೆ. ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಬಡವರ ಕುಟುಂಬಗಳನ್ನು ಉಳಿಸಬೇಕು ಎಂದು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದನ್ನು 10 ಕೆ.ಜಿ.ಗೆ ಹೆಚ್ಚಿಸಲಾಗುವುದು. ಆ ಮೂಲಕ ಹಸಿವುಮುಕ್ತ ರಾಜ್ಯ ನಿರ್ಮಾಣಕ್ಕೆ ಪಣತೊಟ್ಟಿದ್ದೇವೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರೂ ಇಂತಹ ಯೋಜನೆ ಜಾರಿ ಮಾಡಲಿಲ್ಲ. ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ಬಂದರೆ ನುಡಿದಂತೆ ನಡೆಯುತ್ತಾರೆ ಎಂದು ನೀವೆಲ್ಲರೂ ನಂಬಿಕೆ ಇಟ್ಟಿದ್ದೀರಿ ಎಂದು ಹೇಳಿದರು.
ಕಾಂಗ್ರೆಸ್’ ಗ್ಯಾರಂಟಿ ಯೋಜನೆಗಳ ಕುರಿತು ನಾನು ಹಾಗೂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಕಾರ್ಡ್ ಗೆ ಸಹಿ ಮಾಡಿದ್ದು, ಈ ಕಾರ್ಡ್ ಅನ್ನು ನೀವು ಪ್ರತಿ ಮನೆ ಮನೆಗೆ ತಲುಪಿಸಬೇಕು. ಮೇ.15ರ ವೇಳೆಗೆ ಸರ್ಕಾರ ರಚನೆಯಾಗಲಿದ್ದು, ಜೂನ್ ತಿಂಗಳಿಂದಲೇ ಈ ಯೋಜನೆ ಜಾರಿಗೆ ನಾವು ಪ್ರಯತ್ನಿಸುತ್ತಿದ್ದೇವೆ. ಇಲ್ಲಿರುವ ನೀವುಗಳು ನಿಮ್ಮ ಮನೆಯವರು ಹಾಗೂ ಸಂಬಂಧಿಗಳು, ಅಕ್ಕಪಕ್ಕದ ಮನೆಯವರು ಸೇರಿದಂತೆ ಒಬ್ಬೊಬ್ಬರು ನಾಲ್ಕೈದು ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಹಾಕಿಸಬೇಕು ಎಂದು ಅವರು ಮನವಿ ಮಾಡಿದರು.
ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಅಧಿಕಾರದಲ್ಲಿದೆ. ನಿಮ್ಮ ಕ್ಷೇತ್ರದಲ್ಲಿ ಕೆಲವು ಯುವಕರು ಪಿಎಸ್’ಐ ಹುದ್ದೆ ಪಡೆಯಲು ಹಣ ನೀಡಿ ಜೈಲು ಸೇರಿ ಅವರ ಬದುಕು ನಾಶ ಮಾಡಿಕೊಂಡಿದ್ದಾರೆ. ನಮ್ಮ ಕಾಲದಲ್ಲಿ ನಾವು ಯಾರ ಬಳಿಯಾದರೂ ಹಣ ಪಡೆದು ಈ ರೀತಿ ಬದುಕು ನಾಶ ಮಾಡಿದ್ದೆವಾ? ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ.
ಪ್ರಾರ್ಥಿಸುತ್ತೇನೆ. ಈ ಕ್ಷೇತ್ರದಲ್ಲಿ ಬಾಲಕೃಷ್ಣ ಅವರು ಮಾತ್ರ ಪಕ್ಷದ ಟಿಕೆಟ್ ಗೆ ಅರ್ಜಿ ಹಾಕಿದ್ದು, ನೀವೆಲ್ಲರೂ ಅವರನ್ನು ಗೆಲ್ಲಿಸಿ ವಿಧಾನ ಸೌಧದಲ್ಲಿ ಕೂರಿಸಿ ನಮಗೆ ಶಕ್ತಿ ನೀಡಬೇಕು ಎಂದು ಡಿಕೆಶಿ ಹೇಳಿದರು.
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ ಕೆ ಸುರೇಶ್, ಮಾಜಿ ಸಚಿವ ಎಚ್ ಎಂ ರೇವಣ್ಣ, ಮಾಜಿ ಶಾಸಕ ಬಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

Join Whatsapp
Exit mobile version