ಬೆಂಗಳೂರು: BSF, CRPF, CISF, ITBP, SSB ಹುದ್ದೆಗಳಿಗೆ ನಡೆಯಬೇಕಾಗಿರುವ ಪರೀಕ್ಷೆಯಲ್ಲಿ ಕನ್ನಡವನ್ನು ನಿರ್ಲ್ಯಕ್ಷಿಸಿರುವುದು ಸ್ವೀಕಾರಾರ್ಹವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಎಲ್ಲೆಡೆ ಮೊಳಗಿದೆ. ಇದರ ನಡುವೆ ಸ್ಟಾಫ್ ಸೆಲೆಕ್ಷನ್ ಕಮಿಷನ್ BSF, CRPF, CISF, ITBP, SSB ಹುದ್ದೆಗಳಿಗೆ ನಡೆಯಬೇಕಾಗಿರುವ ಪರೀಕ್ಷೆಯಲ್ಲಿ ಕನ್ನಡವನ್ನು ನಿರ್ಲ್ಯಕ್ಷಿಸಿರುವುದು ಸ್ವೀಕಾರಾರ್ಹವಲ್ಲ. ಗಾಯನ ಮೊಳಗಿಸುತ್ತಿರುವ ಕೋಟಿ ಕಂಠಗಳು ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.
ಪರೀಕ್ಷೆಯಲ್ಲಿ ಕನ್ನಡ ನಿರ್ಲಕ್ಷ್ಯದಿಂದ ಹಲವಾರು ಕನ್ನಡಿಗರು ಅವಕಾಶ ವಂಚಿತರಾಗುತ್ತಾರೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯಕ್ಕೆ ನ್ಯಾಯ ದೊರಕಿಸುವ ಪ್ರಯತ್ನ ಮಾಡಬೇಕು. ಇಲ್ಲವಾದಲ್ಲಿ ಕನ್ನಡಿಗರ ಪರವಾಗಿ ಹೋರಾಟದ ಹಾದಿ ಹಿಡಿಯಬೇಕಾದೀತು. ಇದು ಒಬ್ಬ ಕನ್ನಡಿಗನ ಎಚ್ಚರಿಕೆ ಎಂದು ಅವರು ಸರ್ಕಾರವನ್ನು ಎಚ್ಚರಿಸಿದ್ದಾರೆ.