ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗೆ ಸೇರಿದ ಮೂವರು ಮುಖಂಡರನ್ನು ಅಕ್ರಮವಾಗಿ ಬಂಧನದಲ್ಲಿಟ್ಟಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಮತ್ತು ಸಂಘಟನೆಯ ಕಾರ್ಯಕರ್ತರು ಮಂಗಳವಾರ ಬೆಳಗ್ಗೆಯಿಂದಲೇ ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಸುತ್ತಮುತ್ತಲ ಗ್ರಾಮಗಳ ನೂರಾರು ಯುವಕರು ಠಾಣೆಯತ್ತ ಜಮಾಯಿಸಿದ್ದಾರೆ.
ಪಾಪ್ಯುಲರ್ ಫ್ರಂಟ್ ಉಪ್ಪಿನಂಗಡಿ ವಲಯದ ಅಧ್ಯಕ್ಷ ಅಬ್ದುಲ್ ಹಮೀದ್, ಮುಖಂಡರಾದ ಝಕರಿಯಾ ಕೋಡಿಪ್ಪಾಡಿ, ಮುಸ್ತಫಾ ಮುಸ್ಲಿಯಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನು ಖಂಡಿಸಿ ಗ್ರಾಮಸ್ಥರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ಇತ್ತೀಚೆಗೆ ಉಪ್ಪಿನಂಗಡಿಯ ಹಳೆಗೇಟು ಸಮೀಪ ಮೀನು ವ್ಯಾಪಾರಿಗಳಾದ ಅಶೋಕ್, ಮೋಹನ್, ಮಹೇಶ್ ಎಂಬವರ ಮೇಲೆ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿತ್ತು. ಇದಕ್ಕೂ ಮೊದಲು ಉಪ್ಪಿನಂಗಡಿ ಸಮೀಪದ ಇಳಂತಿಳ ಗ್ರಾಮದ ಅಂಡೆತಡ್ಕ ಎಂಬಲ್ಲಿ ಅಬ್ದುಲ್ ಝಕರಿಯಾ, ಸಿದ್ದೀಕ್ ಮತ್ತು ಅಯ್ಯೂಬ್ ಎಂಬವರ ಮೇಲೆ ಸಂಘಪರಿವಾರದ ಜಯರಾಮ್ ಮತ್ತು ಶೋಧನ್ ಮತ್ತು ತಂಡ ದಾಳಿ ನಡೆಸಿತ್ತು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಈ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಗೆ ಸಂಬಂಧವಿಲ್ಲದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದು ಅಕ್ಷಮ್ಯ. ಸಂಘಟನೆಯ ನಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಉಪ್ಪಿನಂಗಡಿ ಪೊಲೀಸ್ ಠಾಣೆ ಎದುರು ಅಹೋರಾತ್ರಿ ಧರಣಿ ನಡೆಸುವುದಲ್ಲದೆ, ಜಿಲ್ಲಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.
ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News