ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಮತ್ತು ಇತರರ ವಿರುದ್ಧದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಸುಮಾರು 4 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನಿಲ್ ದೇಶ್ಮುಖ್ ವಿರುದ್ಧ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತಾತ್ಕಾಲಿಕ ಮುಟ್ಟುಗೋಲು ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು. ದೇಶ್ಮುಖ್ ಅವರನ್ನು ಪ್ರಶ್ನಿಸಲು ಜಾರಿ ನಿರ್ದೇಶನಾಲಯ (ED) ಮೂರು ಸಮನ್ಸ್ ನೀಡಿದ್ದು, ಅವರು ಯಾವುದೇ ವಿಚಾರಣೆಗೂ ಹಾಜರಾಗಿಲ್ಲ.ಅನಿಲ್ ದೇಶ್ಮುಖ್ ಪುತ್ರ ಹೃಷಿಕೇಶ್ ಮತ್ತು ಪತ್ನಿ ಆರತಿಗೆ ಜಾರಿ ನಿರ್ದೇಶನಾಲಯ ಬುಧವಾರ ಸಮನ್ಸ್ ನೀಡಿತ್ತು. ಆದರೆ ಅವರಿಬ್ಬರೂ ಹಾಜರಾಗಿಲ್ಲ ಎನ್ನಲಾಗಿದೆ.
100 ಕೋಟಿ ಲಂಚ ಹಾಗೂ ಸುಲಿಗೆ ದಂಧೆಗೆ ಸಂಬಂಧಿಸಿದಂತೆ ಪಿಎಂಎಲ್‌ಎ ಅಡಿಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ಜಾರಿಗೊಳಿಸಲಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅನಿಲ್ ದೇಶ್ಮುಖ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.