Home ಕರಾವಳಿ ಗುಪ್ತಚರ ವರದಿ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ನಾಲ್ಕು ದಿನ ರಾತ್ರಿ ಕರ್ಫ್ಯೂ ಮಾದರಿ ನಿರ್ಬಂಧ

ಗುಪ್ತಚರ ವರದಿ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ನಾಲ್ಕು ದಿನ ರಾತ್ರಿ ಕರ್ಫ್ಯೂ ಮಾದರಿ ನಿರ್ಬಂಧ

►ಸಂಜೆ 6 ರಿಂದ ಬೆಳಿಗ್ಗೆ 6ರ ವರೆಗೆ ಅಂಗಡಿ, ಮಾಲ್, ಚಿತ್ರಮಂದಿರ, ವಾಣಿಜ್ಯ ಸಂಕೀರ್ಣ, ಪಬ್ ಬಂದ್‍

ಮಂಗಳೂರು: ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆಗಳಿಂದಾಗಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಉದ್ವಿಗ್ನತೆಯಿಂದ ಕೂಡಿದೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮುಂದೆ ಅಹಿತಕರ ಘಟನೆ ನಡೆದು ಶಾಂತಿ ಸುವ್ಯವಸ್ಥೆಗೆ ತೊಂದರೆಯುಂಟಾಗುವ ಸಾಧ್ಯತೆಗಳಿರುವುದರಿಂದ ಈಗಾಗಲೇ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

      ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು ಅತಿ ಅವಶ್ಯಕವಾಗಿರುವ ಹಿನ್ನೆಲೆಯಲ್ಲಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144 ರನ್ವಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ  ಜು.29ರಿಂದ 2022ರ ಆಗಸ್ಟ್ 1ರ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.

ಜಾರಿಗೊಂಡಿರುವ ನಿರ್ಬಂಧಗಳ ವಿವರಗಳಿವು:

ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಇತರೆ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ಜಿಲ್ಲೆಯಾದ್ಯಂತ 2022ರ ಜು.29ರಿಂದ ಆ.01ರ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಮುಚ್ಚಬೇಕು.

ಜಿಲ್ಲೆಯಾದ್ಯಂತ ಮಾಲ್, ಚಿತ್ರಮಂದಿರಗಳು/ಸಿನಿಮಾ ಹಾಲ್, ಪಬ್‍ ಗಳನ್ನು ಜು.29ರಿಂದ ಆ.01ರ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಮುಚ್ಚುವುದು.

ಸಾರ್ವಜನಿಕರು ಮತ್ತು ಅವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ವಸತಿ ಸಮುಚ್ಚಯಗಳಿಂದ ಹೊರಬರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ತುರ್ತು ಸಂದರ್ಭಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅವಶ್ಯಕವೆಂದು ಕಂಡುಬಂದಲ್ಲಿ ಮಾತ್ರ ಬಸ್ಸು, ಆಟೋರಿಕ್ಷಾ ಮತ್ತು ಟ್ಯಾಕ್ಸಿ ವಾಹನಗಳ ಸಂಚಾರಕ್ಕೆ ಅವಕಾಶವಿರುತ್ತದೆ, ಹಾಗೂ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಮಾತ್ರ ವಾಹನಗಳನ್ನು ಬಳಸಲು ಅವಕಾಶ ನೀಡಲಾಗಿದೆ.

ಅನಗತ್ಯ ವಾಹನಗಳ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ಜಿಲ್ಲೆಯಲ್ಲಿ ಎಲ್ಲಾ ಸಭೆ, ಸಮಾರಂಭಗಳನ್ನು, ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿದ ಉತ್ಸವ, ಜಾತ್ರಗಳನ್ನು ಮುಂದೂಡಬೇಕು.

ಜಿಲ್ಲೆಯಲ್ಲಿ ಈಗಾಗಲೇ ನಿಗದಿಪಡಿಸಲಾಗಿರುವ ಖಾಸಗಿ ಸಮಾರಂಭಗಳನ್ನು ಮುಂದೂಡುವುದು.

ಹೋಟೆಲ್, ಪಾರ್ಸೆಲ್ ವ್ಯವಸ್ಥೆ, ತುರ್ತು ವ್ಯವಸ್ಥೆಗಳಿಗೆ ಮಾತ್ರ ಅವಕಾಶವಿರುತ್ತದೆ.

ಜಿಲ್ಲೆಯ ಎಲ್ಲಾ ಸಂಧ್ಯಾ ಕಾಲೇಜುಗಳಿಗೆ 2 ದಿನಗಳ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ

Join Whatsapp
Exit mobile version