ಗ್ರಾಮ ಪಂಚಾಯತ್ ಮಟ್ಟದಲ್ಲೇ ಆದಾಯ ಮತ್ತು ಜಾತಿ ಪ್ರಮಾಣ ಪತ್ರ: ಪ್ರಿಯಾಂಕ್ ಖರ್ಗೆ

Prasthutha|

ಬೆಂಗಳೂರು: ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಇನ್ನು ಗ್ರಾಮ ಪಂಚಾಯತ್ ಗಳ ಬಾಪೂಜಿ ಸೇವಾ ಕೇಂದ್ರದಲ್ಲಿಯೇ ನೀಡಲು ತೀರ್ಮಾನಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

- Advertisement -


ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, “ರಾಜ್ಯದ ಗ್ರಾಮೀಣ ಭಾಗಗಳ ಜನತೆಗೆ ಹೆಚ್ಚಿನ ಅನುಕೂಲ ಒದಗಿಸುವ ನಿಟ್ಟಿನಲ್ಲಿ ನಾಡಕಚೇರಿಗಳಲ್ಲಿ, ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸರ್ಕಾರಿ ಸೇವೆಗಳು ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಲಭ್ಯವಾಗಲಿದೆ” ಎಂದು ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರು ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳ ಜೊತೆಗೆ ಆದಾಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಹಾಗೂ ಆಧಾರ್ ಸೇವೆಗಳ ಸೌಲಭ್ಯವನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲಿ ರಾಜ್ಯದ ಜನ ಪಡೆಯಬಹುದಾಗಿದೆ.


ಬಹುತೇಕ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವುದರಿಂದ ಬೇರೆ ಬೇರೆ ಇಲಾಖೆಗಳ ಸರ್ಕಾರಿ ಕಚೇರಿಗಳಿಗೆ ಹೋಗುವ ಅವಶ್ಯಕತೆ ಕಡಿಮೆಯಾಗಲಿದೆ. ಜನಪರವಾಗಿ ಜನರಿಗೆ ಸುಲಲಿತವಾಗಿ ಸೇವೆಗಳನ್ನು ಒದಗಿಸಲು ನಮ್ಮ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂದು ಬರೆದಿದ್ದಾರೆ.

Join Whatsapp