ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ವೃದ್ಧಿಸುತ್ತಿರುವ ಹಿನ್ನಲೆಯಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ಕರೆಯಲಾಗಿದೆ.
ಡೆಂಗ್ಯೂ ಜ್ವರ ಹೆಚ್ಚಳವಾಗುತ್ತಿರುವ ಕಾರಣ ಸಂಬಂಧಿಸಿದ ಇಲಾಖೆಗಳ ಪಾತ್ರದ ಕುರಿತು ಚರ್ಚಿಸಿ, ಅಗತ್ಯ ಸಮನ್ವಯವನ್ನು ಸಾಧಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ದಿನಾಂಕ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 313ರಲ್ಲಿ ಸಮನ್ವಯ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ರಂದೀಪ್ ಡಿ. ಸಭಾ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ. ರಾಜ್ಯದ ಡೆಂಗ್ಯೂ ಜ್ವರ ಪರಿಸ್ಥಿತಿಯ ಹಿನ್ನಲೆಯಲ್ಲಿ ನಿಯಂತ್ರಣ ಕ್ರಮಗಳ ಪರಿಣಾಮ ಅನುಷ್ಠಾನದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ನಗರಾಭಿವೃದ್ಧಿ ಇಲಾಖೆಗಳ ಪಾತ್ರವು ಪ್ರಮುಖವಾಗಿದೆ ಎಂದಿದ್ದಾರೆ.