Home ಟಾಪ್ ಸುದ್ದಿಗಳು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಂಭ್ರಮದ ಸ್ವಾತಂತ್ರ್ಯದ ಧ್ವಜಾರೋಹಣ: ನಾಡಿನ ಜನತೆಗೆ ಅಮೃತ ಮಹೋತ್ಸವದ ಸಂದೇಶ...

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಂಭ್ರಮದ ಸ್ವಾತಂತ್ರ್ಯದ ಧ್ವಜಾರೋಹಣ: ನಾಡಿನ ಜನತೆಗೆ ಅಮೃತ ಮಹೋತ್ಸವದ ಸಂದೇಶ ನೀಡಿದ ಸಿಎಂ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು.

ಬಳಿಕ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದ ಅವರು, 1857ರಲ್ಲಿ ನಡೆದ ಘಟನೆಯನ್ನು ನಾವು ಪ್ರಥಮ ಸ್ವಾತಂತ್ರ್ಯ ದಂಗೆ ಎಂದು ಕರೆಯುತ್ತೇವೆ. ಆದರೇ ಅದಕ್ಕೂ ಮುಂಚೆ 1824ರಲ್ಲಿಯೇ ಕನ್ನಡತಿ ಕಿತ್ತೂರು ರಾಣಿ ಚೆನ್ನಮ್ಮ, ಅವರ ಬಂಟ ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸೋಲಿನ ರುಚಿ ತೋರಿಸಿದ ಮೊದಲಿಗರಾಗಿದ್ದರು ಎಂದು ಬಸವರಾಜ ಬೊಮ್ಮಾಯಿ ಹೇಳಿದರು. 

‘ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕೋಟ್ಯಂತರ ಜನರು ಪಾಲ್ಗೊಂಡಿದ್ದರು. ಬದ್ಧತೆ ಹೋರಾಟದಿಂದ ಅತಿಶಕ್ತ ಬ್ರಿಟಿಷ್ ಸಾಮ್ರಾಜ್ಯವನ್ನು ಮಣಿಸಬಹುದು ಎಂಬುದನ್ನು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸಾಧಿಸಿ ತೋರಿಸಿದರು. ಬಹುತೇಕ ಹೋರಾಟಗಾರರು ಅನಾಮಧೇಯರಾಗಿಯೇ ಉಳಿದರು. ಅಂಥ ಅನಾಮಧೇಯ ಹೋರಾಟಗಾರರಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಮರ್ಪಿಸುತ್ತಿದ್ದೇನೆ’ ಎಂದು ಹೇಳಿದರು.

ಕರ್ನಾಟಕ ದೇಶದಲ್ಲಿಯೇ ವಿಶಿಷ್ಟವಾದ ರಾಜ್ಯವಾಗಿದೆ. ಎಲ್ಲ ತರಹದ ಸಂಪನ್ಮೂಲಗಳು ಹೇರಳವಾಗಿವೆ. ಹಲವಾರು ಕ್ಷೇತ್ರಗಳಲ್ಲಿ ಕರ್ನಾಟಕ ರಾಜ್ಯ ನಂಬರ್ 1 ಆಗಿದೆ. ದೇಶದ ಜಿ.ಡಿ.ಪಿ ಯಲ್ಲಿ ಶೇ.9ರಷ್ಟು ಕೊಡುಗೆ ನಮ್ಮದಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ಈ ದೇಶವನ್ನು ಕಟ್ಟಲು ಕೂಲಿ ಕಾರ್ಮಿಕರಿಂದ ಹಿಡಿದು ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳ ತನಕ ಎಲ್ಲರೂ ತಮ್ಮ ತಮ್ಮ ಕೊಡುಗೆ ನೀಡಿ, ದೇಶವನ್ನು ಕಟ್ಟಿದ್ದಾರೆ ಎಂದು ಸಿಎಂ ಬೊಮ್ಮಾಯಿ ಸ್ಮರಿಸಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸ್ವಚ್ಛತೆ, ಪೌಷ್ಟಿಕತೆ ಕಾಪಾಡಲು, ರೈತರು, ಶ್ರಮಿಕರ ಅಭ್ಯುದಯಕ್ಕಾಗಿ ಹಾಗೂ ಕೆಚ್ಚೆದೆಯ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ಕೆಲವು ಕೊಡುಗೆಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ.

ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೇ. 100 ರಷ್ಟು ಶೌಚಾಲಯಗಳ ನಿರ್ಮಾಣವನ್ನು 250 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಆ ಮೂಲಕ ಶಾಲೆ, ಕಾಲೇಜುಗಳಲ್ಲಿ ಸ್ವಚ್ಛ-ಆರೋಗ್ಯಕರ ವಾತಾವರಣ ನಿರ್ಮಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಮ್ಮ ಭಾಷಣದಲ್ಲಿ ಪ್ರಕಟಿಸಿದರು.

 ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ವರೆಗೆ ಸಾಲ-ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗುವುದು. ರೈತರ ಮಕ್ಕಳಿಗೆ ಜಾರಿಗೊಳಿಸಿರುವ ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯವನ್ನು ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

Join Whatsapp
Exit mobile version