ಮಹಿಳಾ ಟೆಸ್ಟ್ ಕ್ರಿಕೆಟ್​ನಲ್ಲಿ 603 ರನ್​ ಕಲೆ ಹಾಕಿ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

Prasthutha|

ಚೆನ್ನೈ: ಇಲ್ಲಿಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಿ ಹೊಸ ಇತಿಹಾಸ ನಿರ್ಮಿಸಿದೆ.

- Advertisement -

603 ರನ್​ಗಳೊಂದಿಗೆ ಮಹಿಳಾ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಆಸ್ಟ್ರೇಲಿಯಾ ಮಹಿಳಾ ತಂಡದ ಹೆಸರಿನಲ್ಲಿತ್ತು.

2024 ರಲ್ಲಿ ಪರ್ತ್​ನಲ್ಲಿ ನಡೆದ ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 575 ರನ್​ಗಳಿಸಿ ಈ ದಾಖಲೆ ಬರೆದಿತ್ತು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಮಹಿಳಾ ಟೆಸ್ಟ್​ನಲ್ಲಿ 600+ ರನ್ ಕಲೆಹಾಕಿದ ಮೊದಲ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

- Advertisement -

ಈ ಪಂದ್ಯದ ಮೊದಲ ದಿನದಾಟದಲ್ಲಿ 525 ರನ್ ಕಲೆಹಾಕಿದ್ದ ಭಾರತ ತಂಡವು ಎರಡನೇ ದಿನದಾಟದ ಮೊದಲ ಸೆಷನ್​ನಲ್ಲೇ ಡಿಕ್ಲೇರ್ ಘೋಷಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 292 ರನ್​ಗಳ ಜೊತೆಯಾಟವಾಡಿದ ಬಳಿಕ ಸ್ಮೃತಿ ಮಂಧಾನ ಔಟಾದರು.

161 ಎಸೆತಗಳನ್ನು ಎದುರಿಸಿದ್ದ ಸ್ಮೃತಿ ಮಂಧಾನ 1 ಸಿಕ್ಸ್ ಹಾಗೂ 27 ಫೋರ್​ಗಳೊಂದಿಗೆ 149 ರನ್ ಬಾರಿಸಿದ್ದರು. ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಶಫಾಲಿ ವರ್ಮಾ 197 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 24 ಫೋರ್​ಗಳೊಂದಿಗೆ 205 ರನ್ ಚಚ್ಚಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ದ್ವಿಶತಕ ಬಾರಿಸಿದ ಆಟಗಾರ್ತಿ ಎನಿಸಿಕೊಂಡರು.

ಇನ್ನು ಆರಂಭಿಕರಿಬ್ಬರು ನಿರ್ಗಮನದ ಬಳಿಕ ಬಂದ ಜೆಮಿಮಾ ರೊಡ್ರಿಗಾಸ್ (55) ಹಾಗೂ ಹರ್ಮನ್​ಪ್ರೀತ್ ಕೌರ್ (69) ಅರ್ಧಶತಕ ಬಾರಿಸಿ ಮಿಂಚಿದರು. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ 90 ಎಸೆತಗಳಲ್ಲಿ 16 ಫೋರ್​ಗಳೊಂದಿಗೆ 86 ರನ್ ಚಚ್ಚಿದರು. ಈ ಮೂಲಕ ಟೀಮ್ ಇಂಡಿಯಾ 115.1 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 603 ರನ್ ಕಲೆಹಾಕಿ ಮೊದಲ ಇನಿಂಗ್ಸ್​ ಅನ್ನು ಡಿಕ್ಲೇರ್ ಮಾಡಿಕೊಂಡಿದೆ.

ಪುರುಷರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸ್ಕೋರ್​ ಗಳಿಸಿದ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿದೆ.

1997 ರಲ್ಲಿ ಕೊಲಂಬೊದಲ್ಲಿ ನಡೆದ ಭಾರತದ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ತಂಡವು 952 ರನ್ ಪೇರಿಸಿ ಈ ವಿಶ್ವ ದಾಖಲೆ ಬರೆದಿದೆ.

ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತೀಯ ಪುರುಷರ ತಂಡ ಕಲೆಹಾಕಿದ ಗರಿಷ್ಠ ಸ್ಕೋರ್ 759 ರನ್​ಗಳು. 2016 ರಲ್ಲಿ ಚೆನ್ನೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮೊತ್ತ ಪೇರಿಸಿ ಭಾರತ ತಂಡ ಈ ದಾಖಲೆ ಬರೆದಿದೆ.

Join Whatsapp