ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ – ದ.ಆಫ್ರಿಕಾ T-20 ಕ್ರಿಕೆಟ್: ಬಿಗಿ ಪೊಲೀಸ್ ಬಂದೋಬಸ್ತ್

Prasthutha|

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ T-20 ಕ್ರಿಕೆಟ್ ಪಂದ್ಯಾಟ ನಡೆಯುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ತೆಗೆದುಕೊಳ್ಳಲಾದ ರಕ್ಷಣೆ ಮತ್ತು ಭದ್ರತಾ ವ್ಯವಸ್ಥೆಯ ಮುಂಜಾಗರೂಕತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳಾದ ರೋಜರ್ ಬಿನ್ನಿ, ಸಂತೋಷ್ ಮೆನನ್, ವಿನಯ್ ಮೃತ್ಯುಂಜಯ, ಅಭಿರಾಮ್, ಕಾರ್ತಿಕ್, D S ಅರುಣ್ ಹಾಗೂ ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ KSCA ಅಧ್ಯಕ್ಷ ರೋಜರ್ ಬಿನ್ನಿ, ಸಚಿವರಿಗೆ ಮನವಿಯನ್ನು ಸಲ್ಲಿಸಿ, ಐದು ದಿನಗಳ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪಂದ್ಯಗಳಿಗೆ ಪೊಲೀಸ್ ಇಲಾಖೆ, ವಿಧಿಸುವ ಭದ್ರತಾ ಶುಲ್ಕವನ್ನು ನಾಲ್ಕು ಪಟ್ಟು ಹೆಚ್ಚಿಸಿದ್ದು, ಅದನ್ನು ಪರಿಷ್ಕರಿಸಬೇಕೆಂದು ಕೋರಿಕೆ ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಸಚಿವರು, ಅಧಿಕಾರಿಗಳ ಜತೆ ಇದರ ಬಗ್ಗೆ ಚರ್ಚಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.



Join Whatsapp