Home ಟಾಪ್ ಸುದ್ದಿಗಳು ಇನ್ ಸ್ಪೆಕ್ಟರ್ ನಂದೀಶ್ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕುಮಾರಸ್ವಾಮಿ ಆಗ್ರಹ

ಇನ್ ಸ್ಪೆಕ್ಟರ್ ನಂದೀಶ್ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕುಮಾರಸ್ವಾಮಿ ಆಗ್ರಹ

ಬೆಂಗಳೂರು:  ನಂದೀಶ್ ಅವರ ಸಾವು ಸರ್ಕಾರದಿಂದಲೇ ಆಗಿರುವ ಕಗ್ಗೊಲೆಯೇ ಹೊರತು ಕೇವಲ ಹೃದಯಾಘಾತ ಅಲ್ಲ. ಆದ್ದರಿಂದ ಅವರ ಸಾವಿಗೆ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,  ‘ಈಗ ಸರ್ಕಾರವೇ ಸತ್ಯ ಹೇಳಿದೆ! ಸದ್ಯ, ಸಾವಿನಲ್ಲೂ ಸತ್ಯ ಹೇಳುವ ಧೈರ್ಯವನ್ನು ಸರ್ಕಾರ ಮಾಡಿದೆ. ಬೊಮ್ಮಾಯಿ ಸಂಪುಟದ ಸಚಿವರೇ ವಿಷಯ ಬಹಿರಂಗಪಡಿಸಿದ್ದಾರೆ. ಸಚಿವ ಎಂ.ಟಿ.ಬಿ. ನಾಗರಾಜ್ ಅವರ ಹೇಳಿಕೆಯು ಈ ಸರ್ಕಾರದ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ ಹಿಡಿದ ಕನ್ನಡಿ’ ಎಂದು ಪ್ರತಿಕ್ರಿಯಿಸಿದರು.

ಸಚಿವರೇ ಹೇಳಿದಂತೆ 70-80 ಲಕ್ಷಗಳನ್ನು ನಂದೀಶ್ ಅವರು ಯಾರಿಗೆ ಕೊಟ್ಟರು? ಇದರಲ್ಲಿ ಅವರ ಮೇಲಿನ ಉನ್ನತ ಅಧಿಕಾರಿಗಳು, ಗೃಹ ಸಚಿವರು ಮತ್ತು ಮುಖ್ಯಮಂತ್ರಿಗೆ ಪರ್ಸಂಟೇಜ್ ಹೋಗಿದೆಯಾ? ಅಥವಾ ಕಾಣದ ರಿಮೋಟ್ ಯಾವುದಾದರೂ ಇದೆಯಾ? ಸಚಿವರಂತೆ ನೀವೂ ಸತ್ಯ ಹೇಳಿ ಸಿ.ಎಂ. ಸಾಹೇಬರೇ  ಎಂದು ಪ್ರಶ್ನಿಸಿದರು.

‘ಸಂಘ ಸಂಸ್ಕಾರದ ಗೃಹ ಸಚಿವರು ಉತ್ತರ ನೀಡಲೇಬೇಕು. ಧಮ್ಮಿದ್ರೆ, ತಾಕತ್ತಿದ್ರೆ ಎನ್ನುವ ಮುಖ್ಯಮಂತ್ರಿ ಅವರು ಈ ಬಗ್ಗೆ ಮೌನ ಮುರಿಯುವ ತಾಕತ್ತು ತೋರಬೇಕು’ ಎಂದರು.

‘ನಂದೀಶ್ ಅವರ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಬೇಕು. ಈ ಸಾವಿಗೆ ಬಿಜೆಪಿ ಹೈಕಮಾಂಡ್ ಕೃಪಾಕಟಾಕ್ಷ ಇರುವ, ಅದರಲ್ಲೂ ಉತ್ತರ ಭಾರತ ಮೂಲದ ಹಿರಿಯ ಅಧಿಕಾರಿಗಳ ಉದ್ಧಟತನ, ಕಿರುಕುಳ, ಸರ್ಕಾರದ ನಡವಳಿಕೆ, ಕಾಸಿಗಾಗಿ ಹುದ್ದೆ ಕೊಡುತ್ತಿರುವುದೇ ಕಾರಣ’ ಎಂದು ದೂರಿದರು.

ಅಮಾನತುಗೊಂಡಿದ್ದ ಕೆ.ಆರ್.ಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಚ್.ಎಲ್. ನಂದೀಶ್ ಹೃದಯಾಘಾತದಿಂದ ಗುರುವಾರ ಮೃತಪಟ್ಟ ಸಂದರ್ಭದಲ್ಲಿ ಅಂತಿಮ ದರ್ಶನ ಪಡೆಯಲು ಬಂದ ಸಚಿವ ಎಂ.ಟಿ.ಬಿ. ನಾಗರಾಜ್, ನಂದೀಶ್ ಅವರನ್ನು ಪಬ್ ವಿಚಾರದಲ್ಲಿ ಅಮಾನತುಗೊಳಿಸಿದ್ದಕ್ಕಾಗಿ ಕಿಡಿಕಾರಿದ್ದರು.

‘ತಪ್ಪು ನಡೆದಿದ್ದರೆ ಪೊಲೀಸ್ ಕಮಿಷನರ್ ನೋಟಿಸ್ ನೀಡಬಹುದಿತ್ತು. ಸಣ್ಣ ವಿಷಯಕ್ಕೆ ಅಮಾನತುಗೊಳಿಸಲಾಗಿತ್ತು. ಕಮಿಷನರ್ ಅವರು ದೊಡ್ಡ ಅಪರಾಧ ಮಾಡಿದವರನ್ನೇ ಏನೂ ಮಾಡಿಲ್ಲ. ಲೂಟಿ ಮಾಡುವವರು ಮಾಡುತ್ತಿದ್ದಾರೆ. ಈ ಇನ್ ಸ್ಪೆಕ್ಟರ್ ಗೆ ಒಂದು ಅವಕಾಶ ಕೊಡಬೇಕಾಗಿತ್ತು. ಎಚ್ಚರಿಕೆ ನೀಡಬೇಕಾ ಗಿತ್ತು’ ಎಂದು ಸಚಿವ ನಾಗರಾಜ್ ಹೇಳಿದ್ದರು.

ಅವಧಿ ಮೀರಿ ವಹಿವಾಟು ನಡೆಸುತ್ತಿದ್ದರೂ ಬಾರ್ ಆ್ಯಂಡ್ ರೆಸ್ಟೋರೆಂಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಇನ್ ಸ್ಪೆಕ್ಟರ್ ನಂದೀಶ್ ಅವರನ್ನು ಅಮಾನತುಗೊಳಿಸಲಾಗಿತ್ತು.

Join Whatsapp
Exit mobile version