ಚೆಕ್ ಪೋಸ್ಟ್ ನಲ್ಲಿ ಸಿಸಿಟಿವಿ ಅಳವಡಿಸಿ, ಕೊರೊನಾ ನಿಯಂತ್ರಿಸಿ: ಕೋಟ ಶ್ರೀನಿವಾಸ ಪೂಜಾರಿ ಸೂಚನೆ

Prasthutha|

ಮಡಿಕೇರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಸಿಸಿಟಿವಿ ಅಳವಡಿಸಿ ಕೊರೊನಾ ನಿಯಂತ್ರಿಸಲು ಬಿಗಿಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

- Advertisement -


ನಗರದ ಜಿ.ಪಂ.ಸಭಾಂಗಣದಲ್ಲಿ ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ನಿರ್ವಹಣೆ ಮತ್ತು ಮಳೆ ಹಾನಿ ಪರಿಹಾರ ಕಾರ್ಯಗಳ ಕುರಿತು ಶುಕ್ರವಾರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಾಕ್ ಡೌನ್ ತೆರವುಗೊಳಿಸಿದ ನಂತರ ಕೋವಿಡ್-19 ಪ್ರಕರಣಗಳು ಹೆಚ್ಚಳ ಕಂಡು ಬರುತ್ತಿದೆ. ಹಾಗೆಯೇ ಕೇರಳ ರಾಜ್ಯದಲ್ಲಿ 3ನೇ ಅಲೆ ಕಂಡು ಬಂದಿರುವುದರಿಂದ ಕೇರಳ ರಾಜ್ಯದಿಂದ ಆಗಮಿಸುವವರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕೇರಳದಿಂದ ಆಗಮಿಸುವವರನ್ನು ಕೊಡಗು ಜಿಲ್ಲೆ ಪ್ರವೇಶಕ್ಕೆ ಅವಕಾಶ ನೀಡಬಾರದು. ತುರ್ತು ಕೆಲಸ ಇದ್ದವರಿಗೆ 72 ಗಂಟೆಗಳ ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಿರುವ ನೆಗೆಟಿವ್ ವರದಿ ಇರುವವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಸಚಿವರು ನಿರ್ದೇಶನ ನೀಡಿದರು.


ಕಂದಾಯ, ಪೊಲೀಸ್, ಪಂಚಾಯತ್ ರಾಜ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ಕೋವಿಡ್-19 ನಿಯಂತ್ರಿಸಬಹುದು. ಆ ನಿಟ್ಟಿನಲ್ಲಿ ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸುವಂತೆ ಸಚಿವರು ಸೂಚಿಸಿದರು.

- Advertisement -

ಜಿಲ್ಲಾಧಿಕಾರಿ ಅವರ ಆದೇಶ ಉಲ್ಲಂಘಿಸುವುದು ಕಂಡು ಬಂದರೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿ ಅವರಿಗೆ ತಿಳಿಸಿದರು. ಪೊಲೀಸ್ ಅಧಿಕಾರಿಗಳು ಚೆಕ್ ಪೋಸ್ಟ್ ಗಳಿಗೆ ಆಗಾಗ ಭೇಟಿ ನೀಡಬೇಕು. ಸ್ಥಳೀಯರಿಗೆ ತೊಂದರೆಯಾಗದಂತೆ ಗಮನಹರಿಸಬೇಕು. ಇಷ್ಟೊಂದು ಗಂಭೀರ ಪರಿಸ್ಥಿತಿ ಇದ್ದಾಗ ಎಲ್ಲರೂ ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಚಿವರು ಹೇಳಿದರು.

Join Whatsapp