ಗುವಾಹಟಿ: ಅಸ್ಸಾಂನ 27 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯದ ವಿವಿಧ ಸರಕಾರಿ ಇಲಾಖೆಗಳಲ್ಲಿನ ನೇಮಕಾತಿಗಾಗಿ ಲಿಖಿತ ಪರೀಕ್ಷೆಯಲ್ಲಿ ಸಂಭವನೀಯ ನಕಲು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.
ಅಸ್ಸಾಂನ 35 ಜಿಲ್ಲೆಗಳ ಪೈಕಿ 26 ಜಿಲ್ಲೆಗಳ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಭಾನುವಾರ ನಾಲ್ಕು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ. ಪರೀಕ್ಷೆಗಳು ನಡೆಯುತ್ತಿರುವ ಎಲ್ಲಾ 27 ಜಿಲ್ಲೆಗಳಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ಸಹ ವಿಧಿಸಲಾಗಿದೆ.
ಸರಕಾರದ ಆದೇಶದ ವಿರುದ್ಧ ಗುವಾಹಾಟಿ ಹೈಕೋರ್ಟ್ ತಡೆ ನೀಡಲು ನಿರಾಕರಿಸಿದ ನಂತರ, ಪರೀಕ್ಷಾ ಸಮಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮುಂದುವರಿಸಲು ಅಧಿಕಾರಿಗಳು ನಿರ್ಧರಿಸಿದರು.
ವಿವಿಧ ಸರಕಾರಿ ಇಲಾಖೆಗಳ ಸುಮಾರು 30,000 ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದಕ್ಕಾಗಿ 1.4 ಮಿಲಿಯನ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಮೂರನೇ ಪರೀಕ್ಷೆಯನ್ನು ಸೆಪ್ಟೆಂಬರ್ 11 ರಂದು ನಿಗದಿಪಡಿಸಲಾಗಿದೆ.