ನವದೆಹಲಿ: ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್ ಸಿಟಿಸಿ) ಹಗರಣ ಪ್ರಕರಣದಲ್ಲಿ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದ್ದು, ಸಾರ್ವಜನಿಕವಾಗಿ ಮಾತನಾಡುವಾಗ ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂಥ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದೆ.
ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯಲ್ ಅವರು ತೇಜಸ್ವಿ ಯಾದವ್ ವಿರುದ್ಧದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಅರ್ಜಿಯ ಬಗ್ಗೆ ಆದೇಶವನ್ನು ನೀಡುವಾಗ ಯಾದವ್ ಕುರಿತು, ನೀವು ತುಂಬಾ ಜವಾಬ್ದಾರಿಯುತ ಹುದ್ದೆಯಲ್ಲಿದ್ದೀರಿ, ಅಂತಹ ಪದಗಳನ್ನು ಬಳಸುವುದು ಸರಿಯಲ್ಲ. ಸಾರ್ವಜನಿಕವಾಗಿ ಸೂಕ್ತ ಪದಗಳನ್ನು ಬಳಸಿ ಏಕೆಂದರೆ ನಿಮ್ಮ ಮಾತುಗಳು ಹೆಚ್ಚಿನ ಸಂಖ್ಯೆಯ ಸಾರ್ವಜನಿಕರ ಮೇಲೆ ಪರಿಣಾಮ ಬೀರುತ್ತವೆ ಎಂದು ಹೇಳೀದ್ದಾರೆ.
ತೇಜಸ್ವಿ ಯಾದವ್ ಅವರಿಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. ಐಆರ್ ಸಿಟಿಸಿ ಹಗರಣದ ಆರೋಪಿಗಳಲ್ಲಿ ತೇಜಸ್ವಿ ಯಾದವ್ ಕೂಡ ಒಬ್ಬರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುವಾಗ ತೇಜಸ್ವಿ ಯಾದವ್ ಸಿಬಿಐ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದರು ಎಂದು ಸಿಬಿಐ ಆರೋಪಿಸಿತ್ತು.