ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಅಂತಿಮವಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಬ್ದುಲ್ಲಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ನಂತರ ಈ ಘೋಷಣೆ ಹೊರಬಿದ್ದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಸೌಹಾರ್ದಯುತ ವಾತಾವರಣದಲ್ಲಿ ಉತ್ತಮ ಸಭೆ ನಡೆಸಿದ್ದೇವೆ. ಮೈತ್ರಿ ಅಂತಿಮ ಹಾದಿಯಲ್ಲಿದೆ. ಎಲ್ಲಾ 90 ಸ್ಥಾನಗಳಲ್ಲಿ ಮಾಡಿಕೊಳ್ಳಲಾಗುತ್ತಿದೆ ಎಂದು ಅಬ್ದುಲ್ಲಾ ಹೇಳಿದರು.
90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಸಿಪಿಐ(ಎಂ) (ಎಂವೈ) ತರಿಗಾಮಿ ಕೂಡ ನಮ್ಮೊಂದಿಗಿದ್ದು, ಜನರು ಕೂಡ ನಮ್ಮೊಂದಿಗಿರುವ ವಿಶ್ವಾಸವಿದೆ. ಜನರ ಜೀವನವನ್ನು ಸುಧಾರಿಸಲು ಭಾರಿ ಬಹುಮತದಿಂದ ಗೆಲ್ಲುವ ನಿರೀಕ್ಷೆಯಿದೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದರು.