ಬೆಂಗಳೂರು: ಹಾಸನ ಸಂಸದ, ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ.
ಕೆಲ ದಿನಗಳಿಂದ ಹರದಾಡುತ್ತಿರುವ ವಿಡಿಯೋದಿಂದ ಮುಜುಗರವಾಗಿದೆ. ಈ ವಿಡಿಯೋಗಳಲ್ಲಿ ಪ್ರಜ್ವಲ್ ರೇವಣ್ಣ ಕಾಣಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಪ್ರಜ್ವಲ್ ತಪ್ಪಿತಸ್ಥರು ಎಂಬ ಭಾವನೆ ಉಂಟಾಗಿದೆ. ದೇವೇಗೌಡರು, ಹೆಚ್ ಡಿ ಕುಮಾರಸ್ವಾಮಿ ಅವರು ಹೆಣ್ಣು ಮಕ್ಕಳಿಗೆ ಗೌರವ ನೀಡುತ್ತಾ ಬಂದಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಲಾಟರಿ ನಿಷೇಧ ಮಾಡಿದ್ದರು. ಲಾಟರಿ ನಿಷೇಧಿಸಿ ಹೆಣ್ಣು ಮಕ್ಕಳ ಪುಣ್ಯಕ್ಕೆ ಪಾತ್ರರಾಗಿದ್ದಾರೆ. ಪಕ್ಷದ ಚಿಹ್ನೆಯಲ್ಲಿ ಭತ್ತದ ತೆನೆಹೊತ್ತ ಮಹಿಳೆಯ ಚಿತ್ರ ಇದೆ. ಭತ್ತದ ತೆನೆಹೊತ್ತ ಮಹಿಳೆಯ ಚಿತ್ರ ಹೆಣ್ಣಿನ ಗೌರವವನ್ನ ಪ್ರತಿಪಾದಿಸುತ್ತೆ. ಇಂತಹ ಪರಂಪರೆ ಹೊಂದಿರುವ ಪಕ್ಷಕ್ಕೆ ಮುಜುಗರ ತಂದಿರುವುದು ಸುಳ್ಳಲ್ಲ. ಹೀಗಾಗಿ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.