ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಷೆಂಪೂರ್ ಅವರು ಮಾಧ್ಯಮಗಳಿಗೆ ತಿಳಿಸಿದರು.
ಹಾಗೆಯೇ ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಇಬ್ಬರೂ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ತಕ್ಷಣವೇ ವಿಧಾನಸಭಾಧ್ಯಕ್ಷರಿಗೆ ದೂರು ನೀಡಲು ಕೂಡ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ನಾಳೆ ಅಥವಾ ನಾಡಿದ್ದರ ಒಳಗಾಗಿ ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ರಾಜ್ಯಸಭೆ ಚುನಾವಣೆಯಲ್ಲಿ ನಡೆದ ಬೆಳೆವಣಿಗೆಗಳ ಬಗ್ಗೆ ಕೊಟ್ ಕಮಿಟಿ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಯಿತು.
ಮಾಜಿ ಪ್ರಧಾನಿಗಳು, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಹೆಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಜಪ್ರುಲ್ಲಾ ಖಾನ್, ಎಂ.ಕೃಷ್ಣಾರೆಡ್ಡಿ, ರಾಜಾ ವೆಂಕಟಪ್ಪ ನಾಯಕ, ಕೆ.ಎಂ.ತಿಮ್ಮರಾಯಪ್ಪ, ಟಿ.ಎ.ಶರವಣ, ಶಾರದಾ ಪೂರ್ಯನಾಯಕ್, ರೂತ್ ಮನೋರಮಾ, ವಿ.ನಾರಾಯಣಸ್ವಾಮಿ, ಸಮೃದ್ಧಿ ಮಂಜುನಾಥ್, ವಿಲ್ಸನ್ ರೆಡ್ಡಿ, ಸುಧಾಕರ ಲಾಲ್, ಹೆಚ್.ಎಂ.ರಮೇಶ್ ಗೌಡ, ಆರ್.ಪ್ರಕಾಶ್, ಸಯ್ಯದ್ ಶಫಿ ಉಲ್ಲಾ, ನಾಸಿರ್ ಉಸ್ತಾದ್ ಹಾಗೂ ಕೋರ್ ಕಮಿಟಿ ಸಂಚಾಲಕರಾದ ಕೆ.ಎನ್.ತಿಪ್ಪೇಸ್ವಾಮಿ ಅವರು ಭಾಗವಹಿಸಿದ್ದರು.
ಈ ಸಭೆಯಲ್ಲಿ ಹೆಚ್.ಡಿ.ದೇವೇಗೌಡರು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು ಕೆಲವು ಮಹತ್ವದ ಅಂಶಗಳ ಬಗ್ಗೆ ಪಕ್ಷದ ಪ್ರಮುಖರಿಗೆ ಸಲಹೆ, ಸೂಚನೆಗಳನ್ನು ನೀಡಿದರು.