Home ಟಾಪ್ ಸುದ್ದಿಗಳು ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲ: ಕುಮಾರಸ್ವಾಮಿ

ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲ: ಕುಮಾರಸ್ವಾಮಿ

►’ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕೆ?’


ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಇದಕ್ಕೆ ಜೆಡಿಎಸ್ ಬೆಂಬಲ ಇಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.


ದೆಹಲಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು (ಜೆಡಿಎಸ್) ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಅದಕ್ಕೆ ನಮ್ಮ ಬೆಂಬಲವಿಲ್ಲ ಎಂದರು.


ಕೇರಳದಲ್ಲಿ ಮಳೆಯಿಂದ ನೂರಾರು ಜನರ ಜೀವಕ್ಕೆ ಹಾನಿಯಾಗಿದೆ. ರಾಜ್ಯದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಆಗಿದೆ. ಮತ್ತೊಂದೆಡೆ, ಈಗ ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಸಮಯ. ಹೀಗಾಗಿ ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದರು.


ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧವೂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರೀತಮ್ ಗೌಡ ಯಾರು. ಹಾಸನದಲ್ಲಿ ಬೀದಿ ಬೀದಿಗಳಲ್ಲಿ ಪೆನ್ಡ್ರೈವ್ ಸಿಗಲು ಕಾರಣನಾದ ವ್ಯಕ್ತಿ ಆತ. ಆತನ ಜತೆಗೆ ನಾನು ವೇದಿಕೆ ಹಂಚಿಕೊಳ್ಳಬೇಕಾ? ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ? ಎಂದು ಕೇಳಿದ್ದಾರೆ.

Join Whatsapp
Exit mobile version