ರಾಮನಗರ: ಮುಂಬರುವ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧಿಸಲಿದ್ದು, ಯಾರೊಂದಿಗೂ ಹೊಂದಾಣಿಕೆ ಮಾಡುವುದಿಲ್ಲ ಎಂದು ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಚನ್ನಪಟ್ಟದಲ್ಲಿ ನಡೆದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಎರಡು ರಾಷ್ಟ್ರೀಯ ಪಕ್ಷಗಳು ಕಪೋಲಕಲ್ಪಿತ ಸುದ್ದಿಗಳನ್ನು ಹರಡುತ್ತಿವೆ. ಈ ಸಂಬಂಧ ಪಕ್ಷದ ಕಡೆಯಿಂದ ಯಾವುದೇ ವ್ಯಕ್ತಿಗಳ ಬಾಗಿಲು ತಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೊತೆ ಕೈಜೋಡಿಸುತ್ತೀರ ಎಂಬ ಸುದ್ದಿಗಾರರ ಪ್ರಶ್ನೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬಿಜೆಪಿಯವರು ಏನು ಸಾಧನೆ ಮಾಡಿದ್ದಾರೆಂದು ಅವರ ಜೊತೆ ಕೈಜೋಡಿಸಲಿ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ ಜನತೆಗೆ ಈ ಎರಡು ಪಕ್ಷಗಳು ಮೋಸ ಮಾಡುತ್ತಿದೆ ಎಂದು ಆರೋಪಿಸಿದ ಕುಮಾರಸ್ವಾಮಿ, ರಾಜ್ಯದ ಜನತೆಯ ಹಿತದೃಷ್ಟಿಯಿಂದ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ನಡೆಸುವುದಾಗಿ ತಿಳಿಸಿದ್ದಾರೆ.