ರಾಂಚಿ: ಪ್ರವಾದಿ ಅವಹೇಳನಕಾರರನ್ನು ಬಂಧಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಉಂಟಾದ ಹಿಂಸಾಚಾರ ಮತ್ತು ಗೋಲಿಬಾರ್’ಗೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಉನ್ನತ ಮಟ್ಟದ ತನಿಖೆ ಆದೇಶ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಬ್ಬರ ಸಾವಿಗೆ ಕಾರಣವಾದ ಮತ್ತು ಕನಿಷ್ಠ 24 ಮಂದಿ ಗಾಯಗೊಂಡಿರುವ ಹಿಂಸಾಚಾರದ ತನಿಖೆಗಾಗಿ ಹಿರಿಯ ಐಎಎಸ್ ಅಧಿಕಾರಿ ಅಮಿತಾಭ್ ಕೌಶಾಲ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಸಂಜಯ್ ಲಾಟ್ಕರ್ ಅವರನ್ನು ಒಳಗೊಂಡ ದ್ವಿಸದಸ್ಯ ಸಮಿತಿಯನ್ನು ರಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸಮಿತಿಯು ತನ್ನ ವರದಿಯನ್ನು ಒಂದು ವಾರದಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಮಧ್ಯೆ ಘಟನೆಯ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೂಡ ರಚಿಸಲಾಗಿದೆ ಎಂದು ರಾಂಚಿಯ ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ಅನೀಶ್ ಗುಪ್ತಾ ತಿಳಿಸಿದರು.
“ಇದುವರೆಗೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, ಹಿಂಸಾಚಾರದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಅವರು ಹೇಳಿದರು.